Kannada NewsLatest

ಕೋವಿಡ್ ಟೆಸ್ಟ್ ಹೆಚ್ಚಿಸಲು ನಿರ್ದೇಶನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎಲ್ಲೆಡೆ ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚಿಸಬೇಕು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ತುರ್ತು ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ಗೆ ಮಂಗಳವಾರ (ಏ.13) ಭೇಟಿ ನೀಡಿದ ಅವರು ಜಿಲ್ಲೆಯ ಕೋವಿಡ್-19 ಸ್ಥಿತಿಗತಿ ಮತ್ತು ಚಿಕಿತ್ಸಾ ಸೌಲಭ್ಯಗಳ ಕುರಿತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ನೆರೆಯ ಮಹಾರಾಷ್ಟ್ರ ಸೇರಿದಂತೆ ನಮ್ಮ ರಾಜ್ಯದಲ್ಲೂ ಕೆಲವೆಡೆ ಕೋವಿಡ್-19 ಸೋಂಕು ತೀವ್ರ ಗತಿಯಲ್ಲಿ ಹರಡುತ್ತಿದೆ. ಒಂದು ವೇಳೆ ಪರಿಸ್ಥಿತಿ ಹೀಗೆ ಮುಂದುವರಿದರೆ ಸೋಂಕಿತರಿಗೆ ಸಕಾಲಕ್ಕೆ ಚಿಕಿತ್ಸೆ ಒದಗಿಸುವುದು ಸವಾಲಿನ ಕೆಲಸವಾಗಿರುತ್ತದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಹಾಸಿಗೆ ವ್ಯವಸ್ಥೆ, ಆಕ್ಸಿಜನ್, ಆಂಬ್ಯುಲೆನ್ಸ್ ಮತ್ತಿತರ ವೈದ್ಯಕೀಯ ಸೌಲಭ್ಯಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೋವಿಡ್ ತಪಾಸಣೆ ಹೆಚ್ಚಿಸಲು ನಿರ್ದೇಶನ:

Home add -Advt

ಸೋಂಕು‌ ಹರಡುವಿಕೆಯನ್ನು ತಡೆಗಟ್ಟಬೇಕಾದರೆ ಸೋಂಕಿತರನ್ನು ಗುರುತಿಸಿ ಅವರನ್ನು ಪ್ರತ್ಯೇಕವಾಗಿರಿಸುವುದು ಅತ್ಯಗತ್ಯವಾಗಿದೆ. ಆದ್ದರಿಂದ ಕೋವಿಡ್-19 ತಪಾಸಣೆ ಹೆಚ್ಚಿಸುವ ಮೂಲಕ ಸೋಂಕಿತರನ್ನು ಗುರುತಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸೋಂಕಿತರನ್ನು ಗುರುತಿಸಿ ಸಕಾಲದಲ್ಲಿ ಚಿಕಿತ್ಸೆ ನೀಡುವುದರಿಂದ ಮರಣಪ್ರಮಾಣವನ್ನು ಕೂಡ ಕಡಿಮೆಗೊಳಿಸಬಹುದು. ಆದ್ದರಿಂದ ಕೋವಿಡ್ ತಪಾಸಣೆಗೆ ಆದ್ಯತೆ ನೀಡಬೇಕು.
ಆಸ್ಪತ್ರೆಗೆ ದಾಖಲಾಗುವ ಪ್ರತಿಯೊಬ್ಬ ಸೋಂಕಿತರಿಗೂ ಸರ್ಕಾರದ ಮಾರ್ಗಸೂಚಿ ಪ್ರಕಾರ ಸೂಕ್ತ ಚಿಕಿತ್ಸೆ ನೀಡಬೇಕು.

ಇದೇ ಸಂದರ್ಭದಲ್ಲಿ ಕೋವಿಡ್-19 ಲಸಿಕಾಕರಣ ಕೂಡ ಯಥಾಪ್ರಕಾರ ಮುಂದುವರಿಸಬೇಕು. ಸರಕಾರ ನಿಗದಿಪಡಿಸುವ ಗುರಿಸಾಧನೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ತಿಳಿಸಿದರು.

ಬಿಮ್ಸ್ ಆಸ್ಪತ್ರೆಯಲ್ಲಿ ಲಭ್ಯವಿರುವ ಹಾಸಿಗೆಗಳು, ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯ ಸೇರಿದಂತೆ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಅವರು ಪಡೆದುಕೊಂಡರು.

ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ಜನ್ ಖಾಜಿ, ಬಿಮ್ಸ್ ಮುಖ್ಯ ಆಡಳಿತಾಧಿಕಾರಿ ಸಯ್ಯದ ಆಫ್ರಿನ್ ಬಾನು ಬಳ್ಳಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಬಸವರಾಜ ತುಕ್ಕಾರ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button