ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್ -19 ರೂಪಾಂತರಿ ವೈರಾಣು ಹರಡದಂತೆ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೋವಿಡ್-19ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ತುರ್ತು ಕ್ರಮಗಳ ಬಗ್ಗೆ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸೋಮವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚಾಗಿವೆ. ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಈ ನಿಟ್ಟಿನಲ್ಲಿ ಜನಜಾಗೃತಿ ಮತ್ತು ಲಸಿಕೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಆರೋಗ್ಯ ಇಲಾಖೆಗೆ, ಸಂಬಂಧಪಟ್ಟ ಇತರ ಎಲ್ಲ ಇಲಾಖೆಗಳು ಸಹಕಾರ ನೀಡಬೇಕೆಂದು ರಮೇಶ ಜಾರಕಿಹೊಳಿ ತಿಳಿಸಿದರು.
ಇದೇ ವೇಳೆ, ಕೋವಿಡ್ ಲಸಿಕೆಯ ವಿತರಣೆಯ ಬಗ್ಗೆ ಅವರು ಪರಿಶೀಲನೆ ನಡೆಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಎಸ್.ವಿ.ಮುನ್ಯಾಳ, ಫೆ.22ರಿಂದ ಮಾರ್ಚ್ 15ರವರೆಗೆ 2ನೆಯ ಅಲೆಯ ಹರಡುವಿಕೆಯ ಪ್ರಮಾಣ ಹೆಚ್ಚಾಗಿರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಜಿಲ್ಲೆಯಲ್ಲಿ ಇದುವರೆಗೂ 5 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತ 107 ಪ್ರಕರಣಗಳು ಸಕ್ರಿಯವಾಗಿವೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಮಾ.1ರಿಂದ 3ನೆಯ ಹಂತದ ಲಸಿಕೆಯ ವಿತರಣೆ ಆರಂಭವಾಗಿರುತ್ತದೆ. 60 ವರ್ಷ ಮೇಲ್ಪಟ್ಟ ವಯೋಮಾನದವರಿಗೆ ಲಸಿಕೆ ಲಭ್ಯವಾಗಲಿದೆ ಎಂದು ಡಾ.ಮುನ್ಯಾಳ ತಿಳಿಸಿದರು.
ಮುಂಜಾಗ್ರತಾ ಕ್ರಮವಾಗಿ 14 ಚೆಕ್ ಪೋಸ್ಟ್‌ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮತ್ತು ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿರುವುದಾಗಿ ಅವರು ತಿಳಿಸಿದರು.
ಇನ್ನು, ಕಳಸಾ-ಬಂಡೂರಿ, ಬಳ್ಳಾರಿ ನಾಲಾ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ರಮೇಶ ಜಾರಕಿಹೊಳಿ ಮಾಹಿತಿ ಪಡೆದರು.
ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತ ಡಾ.ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್.ವಿ., ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ