Belagavi NewsBelgaum NewsKarnataka NewsLatestPolitics

*ಸಿಎಂ ಆದ ಬಳಿಕ ಮೊದಲ ಬಾರಿ ಬೆಳಗಾವಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಗೆ ಅಭೂತಪೂರ್ವ ಸ್ವಾಗತ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಗಳಾದ ಬಳಿಕ ಇದೇ ಮೊದಲ ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಸಿಎಂ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬೆಳಗಾವಿಗೆ ಡಿ.ಕೆ. ಶಿವಕುಮಾರ್; ಅದ್ಧೂರಿ ಸ್ವಾಗತ
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾ ಕಾಂಗ್ರೆಸ್ ನಾಯಕರು, ಶಾಸಕರು ಹಾಗೂ ಸಾವಿರಾರು ಕಾರ್ಯಕರ್ತರು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಕೋರಿದರು.
ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊರಬರುತ್ತಿದ್ದಂತೆಯೇ ಅವರ ಆಗಮನಕ್ಕಾಗಿ ಕಾದು ನಿಂತಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು “ಡಿಕೆ… ಡಿಕೆ…” ಎಂಬ ಜಯಘೋಷ ಮೊಳಗಿಸಿದರು. ಪುಷ್ಪವೃಷ್ಟಿ, ಹೂಗುಚ್ಛಗಳ ಸಮರ್ಪಣೆ ಹಾಗೂ ಸಂಭ್ರಮಾಚರಣೆಯ ಮೂಲಕ ತಮ್ಮ ನೆಚ್ಚಿನ ನಾಯಕನನ್ನು ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ. ಪಾಟೀಲ, ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಅಶೋಕ ಪಟ್ಟಣ, ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ವಿಜಯಾನಂದ ಕಾಶಪ್ಪನವರ, ಮಹೇಂದ್ರ ತಮ್ಮಣ್ಣವರ, ವಿಶ್ವಾಸ ವೈದ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಪಕ್ಷದ ಹಲವು ಮುಖಂಡರು ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದರು. ಬಳಿಕ ಮುಖ್ಯಮಂತ್ರಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿದರು.
ಸಾಂಬ್ರಾ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದು, ಮುಖ್ಯಮಂತ್ರಿ ಅವರ ವಾಹನ ಸಾಗುತ್ತಿದ್ದಂತೆ ಜೆಸಿಬಿಗಳ ಮೂಲಕ ಹೂವಿನ ಮಳೆ ಸುರಿಸಲಾಯಿತು. ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗುವ ಮೂಲಕ ಕಾರ್ಯಕರ್ತರು ಸಂಭ್ರಮಿಸಿದರು.
ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಪರಿಸ್ಥಿತಿ, ಬೆಳೆಗಳ ಸ್ಥಿತಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.
“ನನ್ನ ಪ್ರವಾಸ ಬಸವಕಲ್ಯಾಣದಿಂದ ಆರಂಭವಾಗಿ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಬಳಿಕ ಇಂದು ಬೆಳಗಾವಿಗೆ ತಲುಪಿದ್ದೇನೆ. ಸಚಿವರು ಸಹ ಜೊತೆಯಲ್ಲಿದ್ದು, ಈ ಭಾಗದ ಶಾಸಕರೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದೇನೆ” ಎಂದು ಅವರು ಹೇಳಿದರು.

Home add -Advt

ಬೆಳಗಾವಿ ಸುವರ್ಣಸೌಧದಲ್ಲಿ ಇಂದು ಸಿಎಂ ಡಿ.ಕೆ.ಶಿವಕುಮಾರ್ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಬಳಿಕ ಮಹಾರಾಷ್ಟ್ರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾಗುತ್ತಿರುವ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ.

Related Articles

Back to top button