Kannada NewsLatest

ಬಜೆಟ್ ಘೋಷಣೆ ಅನುಷ್ಠಾನ: ಜಿಲ್ಲಾಧಿಕಾರಿ ಪೂರ್ವಭಾವಿ ಸಭೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಜೆಟ್ ಘೋಷಣೆಗಳು ಹಾಗೂ ಅನುಷ್ಠಾನ ಕುರಿತು ಮುಖ್ಯಮಂತ್ರಿಗಳು ಪ್ರಗತಿಯನ್ನು  ಪರಿಶೀಲಿಸಲಿದ್ದಾರೆ. ಆದ್ದರಿಂದ ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಲಾಗಿರುವ ಪ್ರತಿಯೊಂದು ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಮಗ್ರವಾಗಿ ಪರಿಶೀಲಿಸಿ ಕ್ರಿಯಾ ಯೋಜನೆಯ ಅನುಮೋದನೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯನ್ನು ನಡೆಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಮೇ 6) ನಡೆದ ಎಲ್ಲ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಜೆಟ್ ನಲ್ಲಿ ಘೋಷಿಸಿರುವಂತೆ “ಜಾಂಬೋಟಿ ಜೇನು” ಬ್ರ್ಯಾಂಡ್ ನಿರ್ಮಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.

ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಬೆಲ್ಲ ತಯಾರಿಕಾ ಘಟಕಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ ಚಾಲ್ತಿಯಲ್ಲಿರುವ 247 ಘಟಕಗಳಿಗೆ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ನೆರವು ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಜೆಟ್ ನಲ್ಲಿ ಅಥಣಿಗೆ ಮಂಜೂರಾಗಿರುವ ಕೃಷಿ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದುಕೊಂಡ ಅವರು, ಜಮೀನು ಲಭ್ಯತೆ ಮತ್ತಿತರ ವಿಷಯಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಈ ಬಾರಿ ಜಿಲ್ಲೆಯ ಬಿತ್ತನೆ ಪ್ರಮಾಣ ಶೇ.100 ಕ್ಕಿಂತ ಅಧಿಕವಾಗಬೇಕು. ಜಿಲ್ಲೆಗೆ ಮಂಜೂರಾಗಿರುವ ಗೋಶಾಲೆಗಳ ನಿರ್ಮಾಣಕ್ಕೆ ಜಮೀನು ಗುರುತಿಸಬೇಕು ಎಂದು ತಿಳಿಸಿದರು.

ಕುಡಿಯುವ ನೀರು ಪೂರೈಕೆ ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಅಗತ್ಯತೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಮುಂಜಾಗ್ರತಾ ಲಸಿಕೆ ಪ್ರಮಾಣ ಹೆಚ್ಚಿಸಲು ಸೂಚನೆ:

ಮುಂಜಾಗ್ರತಾ ಕ್ರಮವಾಗಿ ನೀಡಲಾಗುತ್ತಿರುವ ಕೋವಿಡ್ ಲಸಿಕೆಯನ್ನು ಮನೆ ಮನೆಗೆ ಹೋಗಿ ನೀಡಬೇಕು. ಇದಕ್ಕಾಗಿ ಒಂದು ಸಹಾಯವಾಣಿ ಕೇಂದ್ರ ಸ್ಥಾಪಿಸುವ ಮೂಲಕ ಬೇಡಿಕೆ ಆಧರಿಸಿ ಮನೆ ಮನೆಗೆ ಹೋಗಿ ಲಸಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಿರ್ದೇಶನ ನೀಡಿದರು.

ಮುಂಜಾಗ್ರತಾ ಲಸಿಕೆ ಪಡೆಯದಿರುವವರನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಿ ಲಸಿಕೆ ನೀಡಬೇಕು. ಇದಕ್ಕಾಗಿ ಸ್ಥಳೀಯ ಸಂಸ್ಥೆಗಳ ನೆರವು ಒದಗಿಸಲಾಗುವುದು ಎಂದರು.

ಕಿದ್ವಾಯಿ ಪ್ರಾದೇಶಿಕ ಆರೋಗ್ಯ ಕೇಂದ್ರ ಸ್ಥಾಪನೆಗಾಗಿ ವಡಗಾವಿಯಲ್ಲಿ ನಾಲ್ಕು ಎಕರೆ ಜಾಗೆ ಗುರುತಿಸಲಾಗಿದೆ. ಈ ಬಗ್ಗೆ ಪ್ರಕ್ರಿಯೆ ನಡೆದಿದೆ ಎಂದು ಡಿಎಚ್‍ಓ ಡಾ.ಎಸ್.ವಿ.ಮುನ್ಯಾಳ ಮಾಹಿತಿ ನೀಡಿದರು.

ಬಿತ್ತನೆಗೆ ಬೀಜಗಳ ಶೇಖರಣೆ:

ಬಿತ್ತನೆಗೆ ಬೇಕಾಗುವ 56 ಸಾವಿರ ಕ್ವಿಂಟಲ್ ಬೀಜಗಳ ಶೇಖರಣೆ ಮಾಡಲಾಗಿದೆ. ಸದ್ಯಕ್ಕೆ ಬಿತ್ತನೆ ಪ್ರಮಾಣ ಶೇ.97 ರಷ್ಟಾಗಿದ್ದು, ಬೀಜ-ಗೊಬ್ಬರ ಕೊರತೆಯಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ವಿವರಿಸಿದರು.

100 ಗೋಶಾಲೆ ಹಾಗೂ ಪಶು ಚಿಕಿತ್ಸಾಲಯಗಳ ಸ್ಥಾಪನೆಗೆ ಬಜೆಟ್ ನಲ್ಲಿ ಘೋಷಣೆಯಾಗಿದ್ದು, ಜಿಲ್ಲಾವಾರು ಎಷ್ಟು ನಿರ್ಮಿಸಬೇಕೆಂದು ನಿಗದಿಯಾಗಿಲ್ಲ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ವಿವರಿಸಿದರು.

ಪೌಷ್ಠಿಕ ಆಹಾರ ಪೂರೈಕೆ ಪರಿಶೀಲನೆಗೆ ಸೂಚನೆ:

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಪ್ರತಿ ತಿಂಗಳಲ್ಲಿ 25 ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಸರಿಯಾದ ಆಹಾರ ಪೂರೈಕೆ ಬಗ್ಗೆ ಪರಿಶೀಲನೆ ನಡೆಸಬೇಕು. ಅಪೌಷ್ಟಿಕ ಮಕ್ಕಳಿಗೆ ವಾರದಲ್ಲಿ ನೀಡಲಾಗುತ್ತಿರುವ ಹಾಲು ಮತ್ತು ಮೊಟ್ಟೆ ಸರಿಯಾಗಿ ನೀಡಬೇಕು. ಮೊಟ್ಟೆ ಸ್ವೀಕರಿಸದ ಮಕ್ಕಳಿಗೆ ಕಡ್ಡಾಯವಾಗಿ ವಾರದಲ್ಲಿ 6 ದಿನ ಹಾಲು ವಿತರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ನಗರದಲ್ಲಿ ವಸತಿ ನಿಲಯಗಳ ಪ್ರವೇಶಾತಿಗೆ ವಿದ್ಯಾರ್ಥಿಗಳಿಂದ ಅಧಿಕ ಅರ್ಜಿಗಳು ಬರುತ್ತಿವೆ ಹಾಗಾಗಿ ನಗರದಲ್ಲಿ ಇನ್ನೂ 2 ವಸತಿ ನಿಲಯಗಳ ಅವಶ್ಯವಿದ್ದು, ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಉಮಾ ಸಾಲಿಗೌಡರ ವಿವರಿಸಿದರು.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವತಿಯಿಂದ 3 ಎಕರೆ ನಿವೇಶನ ಮಂಜೂರು ಮಾಡಲಾಗಿದೆ. ಕಳೆದ ಬಜೆಟ್ ನಂತರ ವಸತಿ ನಿಲಯ ನಿರ್ಮಾಣಕ್ಕೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭ ಮಾಡಲಾಗುವುದು ಎಂದು ಸಾಲಿಗೌಡರ ತಿಳಿಸಿದರು.

ಪೂರ್ಣಗೊಳಿಸಬೇಕು. ಸರ್ಕಾರದ ಅನುದಾನಗಳ ಸಮರ್ಪಕ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. ಉಪ ವಿಭಾಗಾಧಿಕಾರಿಗಳು, ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬೆಳಗಾವಿ ಹಿಡ್ಕಲ್ ಅಣೆಕಟ್ಟು ಪ್ರದೇಶದಲ್ಲಿ ಪಕ್ಷಿಧಾಮ ಮತ್ತು ಚಿಟ್ಟೆಗಳ ಉದ್ಯಾನ: ಪ್ರವಾಸೋದ್ಯಮ ದೃಷ್ಟಿಯಲ್ಲಿ ಅಭಿವೃದ್ಧಿಗೆ ಸೂಚನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button