ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಇಂದು ದೇಶಾದ್ಯಂತ ರೈಲು ರೋಕೋಗೆ ಕರೆ ನಿಡಲಾಗಿದ್ದು, ರಾಜ್ಯಾದ್ಯಂತ ರೈತರು ರೈಲು ತಡೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಹಾಗೂ ರೈತರ ನಡುವೆ ನೂಕಾಟ-ತಳ್ಳಾಟ ನಡೆದಿದೆ.
ಬೆಳಗಾವಿ ರೈಲ್ವೆ ನಿಲ್ದಾಣದ ಬಳಿ ಸೇರಿದ ಸಾವಿರಾರು ರೈತರು, ರೈತ ಮಹಿಳೆಯರು ಹಾಗೂ ಕಾರ್ಮಿಕರು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದರು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ರೈಲು ತಡೆ ನಡೆಸಲೆಂದು ರೈಲು ನಿಲ್ದಾಣದ ಒಳಗೆ ನುಗ್ಗಲು ಮುಂದಾದ ರೈತರನ್ನು ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸರು ತಡೆಯಲು ಯತ್ನಿಸಿದ್ದಾರೆ.
ಈ ವೇಳೆ ರೈತರು ಹಾಗೂ ಪೊಲೀಸರ ನಡುವೆ ಮಾತಿನಚಕಮಕಿ ನಡೆದಿದ್ದು, ನೂರಾರು ರೈತರು ಬ್ಯಾರಿಕೇಡ್ ತಳ್ಳಿ ರೈಲ್ವೆ ನಿಲ್ದಾಣಕ್ಕೆ ನುಗ್ಗಿದರು. ಈ ವೇಳೆ ಪೊಲೀಸರು ರೈತರನ್ನು ಎಳೆದು ನಿಲ್ಲಿಸಲು ಮುಂದಾಗಿದ್ದು, ಹಲವು ರೈತರು ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಪೊಲೀಸರ ದೌರ್ಜನ್ಯಕ್ಕೆ ಅನ್ನದಾತರು ಇನ್ನಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ