ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಆಲಮಟ್ಟಿ ಹಾಗೂ ಹಿಪ್ಪರಗಿ ಬ್ಯಾರೇಜ್ ಹಿನ್ನೀರಿನಿಂದ ಮುಳುಗಡೆಯಾಗುವ ಅಥಣಿ ತಾಲ್ಲೂಕಿನ ಜನವಾಡ, ಮಹಿಷವಾಡಗಿ, ನಂದೇಶ್ವರ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಮನೆಗಳ ಸಂಖ್ಯೆಯ ಆಧಾರದ ಮೇಲೆ ಪಂಚಾಯಿತಿ ಆಸ್ತಿ ರಿಜಿಸ್ಟರ್ ಮತ್ತು ಮುಳುಗಡೆ ಸಮೀಕ್ಷೆ ಆಧರಿಸಿ ಹದಿನೈದು ದಿನಗಳಲ್ಲಿ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದರು.
ಚಿಕ್ಕೋಡಿ ಪ್ರವಾಸಿಮಂದಿರದಲ್ಲಿ ಶನಿವಾರ (ಆ.7) ನಡೆದ ಮುಂಗಾರು ಹಂಗಾಮಿನಲ್ಲಿ ಪ್ರವಾಹ/ಅತಿವೃಷ್ಟಿಯಿಂದ ಬಾಧಿತಗೊಂಡ ಪ್ರದೇಶಗಳಲ್ಲಿ ಕೈಗೊಂಡ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಲಮಟ್ಟಿ ಹಿನ್ನೀರಿನಿಂದ ಮುಳುಗಡೆ ಸಂತ್ರಸ್ತ ಕುಟುಂಬಗಳಿಗೆ ಈಗಾಗಲೇ ಪರಿಹಾರ ನೀಡಿರುವುದರಿಂದ ತಕ್ಷಣವೇ ಅವರಿಗೆ ನೀಡಲಾದ ಸ್ಥಳಗಳಿಗೆ ಸ್ಥಳಾಂತರಗೊಳಿಸಲು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಗೋವಿಂದ ಕಾರಜೋಳ ಸೂಚನೆ ನೀಡಿದರು.
ಹಕ್ಕುಪತ್ರಗಳನ್ನು ನೀಡುವುದರ ಜತೆಗೆ ಪುನರ್ವಸತಿ ಕೇಂದ್ರಗಳಲ್ಲಿ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಪದೇ ಪದೆ ಪ್ರವಾಹ ಪರಿಸ್ಥಿತಿ ಎದುರಾಗುವುದರಿಂದ ಕೂಡಲೇ ಹಕ್ಕುಗಳನ್ನು ವಿತರಿಸಿ ಕುಟುಂಬಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
ಆಲಮಟ್ಟಿ ಜಲಾಶಯದ ಎತ್ತರ 524 ಮೀಟರ್ ಗಮನದಲ್ಲಿಟ್ಟುಕೊಂಡು ಪುನರ್ವಸತಿ ಕೇಂದ್ರಗಳನ್ನು ಗುರುತಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ತಿಳಿಸಿದರು.
ಪ್ರವಾಹ ಅಥವಾ ಅತಿವೃಷ್ಟಿ ಸಂದರ್ಭದಲ್ಲಿ ಟಿಸಿ ದುರಸ್ತಿ, ವಿದ್ಯುತ್ ಪರಿವರ್ತಕಗಳನ್ನು ಒದಗಿಸುವಾಗ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು. ಒಂದು ವೇಳೆ ಈ ರೀತಿಯ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು. ಪ್ರವಾಹದಿಂದ ಹಾನಿಗೊಳಗಾದ ಸೇತುವೆ ಮತ್ತಿತರ ಮೂಲಸೌಕರ್ಯ ದುರಸ್ತಿಗೆ ಸರಕಾರ 120 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಕೂಡಲೇ ಕಾಮಗಾರಿ ಆರಂಭಿಸುವಂತೆ ತಿಳಿಸಿದರು.
ಬೆಳೆಹಾನಿ ಸಮೀಕ್ಷೆ ಲೋಪ; ಅಮಾನತಿಗೆ ಸೂಚನೆ:
ಪ್ರವಾಹ ಕಡಿಮೆಯಾದ ಬಳಿಕ ಜಮೀನುಗಳಿಗೆ ತೆರಳಿ ಬೆಳೆಹಾನಿಯನ್ನು ಸಮರ್ಪಕವಾಗಿ ಸಮೀಕ್ಷೆ ಕೈಗೊಳ್ಳಬೇಕು. ಬೆಳಹಾನಿಗೊಳಗಾದ ಯಾವುದೇ ಜಮೀನು ಸಮೀಕ್ಷೆಯಿಂದ ಹೊರಗುಳಿಯಬಾರದು. ಬೆಳೆ ಕಳೆದುಕೊಂಡ ಎಲ್ಲ ರೈತರಿಗೂ ಪರಿಹಾರ ದೊರಕುವಂತಾಗಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಮೀಕ್ಷೆಯಲ್ಲಿ ಲೋಪದೋಷ ಮಾಡಿದರೆ ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಎಂದು ಉಪ ವಿಭಾಗಾಧಿಕಾರಿಗಳಿಗೆ ತಿಳಿಸಿದರು.
ಮನೆಹಾನಿ ಸಮೀಕ್ಷೆ ಮಾಡುವಾಗ ಎಚ್ಚರಿಕೆಯಿಂದ ಪರಿಶೀಲಿಸಬೇಕು. ಕಡ್ಡಾಯವಾಗಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡಬೇಕು. ಅನರ್ಹರನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತಹ ಅಧಿಕಾರಿ/ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸಚಿವ ಕಾರಜೋಳ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಮೀಕ್ಷೆ ಕೈಗೊಳ್ಳುವ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲಿಸಿ ದೃಢೀಕರಿಸಬೇಕು ಎಂದು ತಿಳಿಸಿದರು.
ಕಲ್ಲೋಳ ಬ್ಯಾರೇಜ್ ನಿರ್ಮಾಣಕ್ಕೆ ಮಂಜೂರಾತಿಗೆ ಕ್ರಮ:
ಕಲ್ಲೋಳ ಬ್ಯಾರೇಜ್ ನಿರ್ಮಾಣದ 35 ಕೋಟಿ ರೂಪಾಯಿ ವೆಚ್ವದ ಯೋಜನೆಗೆ ಮಂಜೂರಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಕೆರೆಗಳನ್ನು ನಿರ್ವಹಿಸುವುದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಹಣಕಾಸು ವ್ಯವಸ್ಥೆ ಮಾಡಿಕೊಂಡು ನಿರ್ವಹಣೆ ಕೈಗೊಳ್ಳಬೇಕು ಎಂದರು.
ಚಿಕ್ಕೋಡಿ ಉಪ ವಿಭಾಗದ ಐದು ತಾಲ್ಲೂಕುಗಳಲ್ಲಿ 19 ಲಕ್ಷ ಗುರಿಯ ಪೈಕಿ 8.26 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಶೇ.42.83 ಗುರಿ ಸಾಧಿಸಲಾಗಿದೆ. ಮೊದಲ ಡೋಸ್ ಪಡೆದುಕೊಂಡು ಹನ್ನೆರಡು ವಾರ ಪೂರ್ಣಗೊಳಿಸಿದವರಿಗೆ ಎರಡನೇ ಡೋಸ್ ಲಸಿಕೆ ನೀಡಬೇಕು ಎಂದರು. ಮನೆಹಾನಿ ಹಾಗೂ ಬೆಳೆಹಾನಿ ಸಮೀಕ್ಷೆ ಕೆಲಸ ಸಮರ್ಪಕವಾಗಿ ನಡೆಸಬೇಕು. ಜನರ ಸಂಕಷ್ಟ ಅರಿತುಕೊಂಡು ಅವರಿಗೆ ಸರಕಾರದ ಎಲ್ಲ ನೆರವು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕ ಪಿ.ರಾಜೀವ್ ಮಾತನಾಡಿ, ಖೇಮಲಾಪುರ ಮತ್ತು ಸಿದ್ಧಾಪುರ ಗ್ರಾಮಗಳ ಪುನರ್ವಸತಿಗೆ ಜಮೀನು ಗುರುತಿಸಲು ಕ್ರಮಕೈಗೊಳ್ಳಬೇಕು ಎಂದರು. ಇದಲ್ಲದೇ ವಿವಿಧ ಕಡೆಗಳಲ್ಲಿ ಅನಧಿಕೃತ ಮನೆಗಳಲ್ಲಿ ವಾಸಿಸುವ ಕುಟುಂಬಗಳು ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡಿದ್ದರೆ ಅವರಿಗೂ ಕೂಡ ಪರಿಹಾರ ಒದಗಿಸಬೇಕು. ಈ ನಿಟ್ಟಿನಲ್ಲಿ ಸರಕಾರದಿಂದ ಸೂಕ್ತ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಕೆಲವು ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆ ಕಂಡುಬಂದಿದ್ದು, ಕೂಡಲೇ ಔಷಧಿ ಪೂರೈಸವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಕ್ಸಿಜನ್ ಘಟಕ ಸ್ಥಾಪನೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರಿಗೆ ಒತ್ತಾಯಿಸಿದರು.
ಪ್ರವಾಹದ ಸಂಕಷ್ಟಕ್ಕೆ ಸಿಲುಕಿರುವ ಭೂರಹಿತ ಕುಟುಂಬಗಳಿಗೆ ವಸತಿ ಒದಗಿಸಲು ಬಡಾವಣೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿಕೊಂಡರು.
ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಮಾತನಾಡಿ, ಮುಳುಗಡೆ ಸಂತ್ರಸ್ತರಿಗೆ ಕೂಡಲೇ ಹಕ್ಕುಗಳನ್ನು ವಿತರಿಸಬೇಕು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಹೇಳಿದರು. ಗ್ರಾಮಸಭೆಗಳನ್ನು ನಡೆಸಿ ಜನರ ಬೇಡಿಕೆಗೆ ಅನುಗುಣವಾಗಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಪ್ರತಿವರ್ಷ ಮುಳುಗಡೆಯಾಗುವ ರಸ್ತೆಗಳ ಎತ್ತರ ಹೆಚ್ಚಿಸುವುದು ಹಾಗೂ ಪರ್ಯಾಯ ಮಾರ್ಗಗಳ ನಿರ್ಮಾಣಕ್ಕೆ ಒತ್ತಾಯಿಸಿದರು. ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕ ಗಣೇಶ ಹುಕ್ಕೇರಿ, ಶಾಸಕ ದುರ್ಯೋಧನ ಐಹೊಳೆ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿನ ಸಮಸ್ಯೆಗಳು ಹಾಗೂ ಆಗಬೇಕಿರುವ ಕೆಲಸಗಳ ಕುರಿತು ಸಚಿವರ ಗಮನಸೆಳೆದರು.
ಅಪರ ಜಿಲ್ಲಾಧಿಕಾರಿ ಆಶೋಕ ದುಡಗುಂಟಿ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ನನಗೆ ಅಸಮಾಧಾನವಿದೆ, 2-3 ದಿನಗಳಲ್ಲಿ ನಿರ್ಧಾರ ತಿಳಿಸುವೆ ಎಂದ ಎಂಟಿಬಿ ನಾಗರಾಜ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ