
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ-ಉತ್ತರ ಕರ್ನಾಟದ ಸ್ವಾಭಿಮಾನದ ಉತ್ಸವವಾಗಿರುವ ಕಿತ್ತೂರು ಉತ್ಸವದ ಐತಿಹಾಸಿಕ ದಿನದಂದು ಸರ್ಕಾರ, ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ವೀರರಾಣಿ ಕಿತ್ತೂರು ಚನ್ನಮ್ಮಾಜಿ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ ನೆರವೇರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟನೆ ಹೊರಡಿಸಿರುವ ಅವರು, ಸರ್ಕಾರ ಕಿತ್ತೂರು ಉತ್ಸವಕ್ಕೆ ಖರ್ಚು ಮಾಡುವ ಅನುದಾನವನ್ನು ಬೈಲಹೊಂಗಲ ದಲ್ಲಿ ಇರುವ ವೀರ ರಾಣಿ ಕಿತ್ತೂರು ಚನ್ನಮ್ಮನ ಸಮಾಧಿ ಅಭಿವೃದ್ಧಿಗೆ ಖರ್ಚು ಮಾಡಬೇಕು ಎಂದು ಕರವೇ ಮನವಿ ಮಾಡಿಕೊಂಡಿದೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮಾ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲು ನಿರ್ಧರಿಸಿದೆ ಆದರೆ ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯುವ ವಿಷಯದಲ್ಲಿ ವಿಳಂಬ ಮಾಡುತ್ತಿದ್ದು ಕಿತ್ತೂರು ಉತ್ಸವಕ್ಕೂ ಮೊದಲು ಎಲ್ಲ ಪ್ರಕ್ರಿಯೆ ಮುಗಿಸಿ ಉತ್ಸವದ ದಿನವೇ ನಾಮಕರಣ ಮಾಡಬೇಕು ಎಂದು ದೀಪಕ ಗುಡಗನಟ್ಟಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ವಿಧಾನಸಭೆಯ ಅಧಿವೇಶನದಲ್ಲಿ ಧ್ವನಿ ಎತ್ತಬೇಕೆಂದು ಒತ್ತಾಯಿಸಿದ್ದಾರೆ.
ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶೀಘ್ರದಲ್ಲೇ ಕರವೇ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಮನವಿ ಅರ್ಪಿಸಲಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ