Kannada NewsLatest

ಬೆಳಗಾವಿಯಲ್ಲಿ 130 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ನಗರದ ವಡಗಾವಿಯ ನಾಲ್ಕು ಎಕರೆ ಜಾಗೆಯಲ್ಲಿ 130 ಕೋಟಿ ವೆಚ್ಚದಲ್ಲಿ ಕಿದ್ಚಾಯಿ ಕ್ಯಾನ್ಸರ್ ಸಂಸ್ಥೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕ ಡಾ.ಸಿ.ರಾಮಚಂದ್ರ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಏ.1) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

ತುಮಕೂರು, ಶಿವಮೊಗ್ಗ, ಮೈಸೂರಿನಲ್ಲಿ ಕೇಂದ್ರ ಆರಂಭಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ ಅವರ ಮುತುವರ್ಜಿಯಿಂದ ಮುಖ್ಯಮಂತ್ರಿಯವರು ಬೆಳಗಾವಿಗೆ ಕ್ಯಾನ್ಸರ್ ಸಂಸ್ಥೆ ಮಂಜೂರು ಮಾಡಲಾಗಿರುತ್ತದೆ. ಮುಂದಿನ ತಿಂಗಳಿನಲ್ಲಿ ಮುಖ್ಯಮಂತ್ರಿಗಳು ಸುಸಜ್ಜಿತ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಆಸ್ಪತ್ರೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.

ಬೆಳಗಾವಿಯಲ್ಲಿ ಸದ್ಯಕ್ಕೆ ನೂರು‌ ಹಾಸಿಗೆ ಆಸ್ಪತ್ರೆ ನಿರ್ಮಿಸಲು ಉದ್ಧೇಶಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು.

ಕಿದ್ವಾಯಿ ಕ್ಯಾನ್ಸರ್ ಕೇಂದ್ರದ ಮಾದರಿಯಲ್ಲಿ ಪ್ರತಿಯೊಂದು ಚಿಕಿತ್ಸೆ ಇಲ್ಲಿ ಲಭ್ಯವಾಗಲಿದೆ. ಎಲ್ಲ ಬಗೆಯ ವಿಭಾಗಗಳನ್ನು ಆರಂಭಿಸಲಾಗುವುದು. ಇದಲ್ಲದೇ ಸಂಶೋಧನಾ ಕೇಂದ್ರ ಕೂಡ ಆರಂಭಿಸುವ ಬಗ್ಗೆ ಚಿಂತನೆಯಿದೆ. ಮುಂಬರುವ ದಿನಗಳಲ್ಲಿ ಆಸ್ಪತ್ರೆ ವಿಸ್ತರಣೆಗೆ ಅನುಕೂಲವಾಗುವಂತೆ ಜಾಗೆಯನ್ನು ಗುರುತಿಸಲಾಗಿದೆ.

ಕ್ಯಾನ್ಸರ್ ರೋಗ ದಿನೆ ದಿನೇ ಹೆಚ್ಚಾಗಿ ಕಂಡುಬರುತ್ತಿದೆ. ಆದ್ದರಿಂದ ಈ ಭಾಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸುವುದು ಅತ್ಯಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಆದ್ದರಿಂದ ಸುಸಜ್ಕಿತ ಮೊಬೈಲ್ ಘಟಕದ ಮೂಲಕ ಕ್ಯಾನ್ಸರ್ ತಪಾಸಣೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

ಏಳು ಜಿಲ್ಲೆಯ ಜನರಿಗೆ ಅನುಕೂಲ-ಶಾಸಕ ಅಭಯ್ ಪಾಟೀಲ:

ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆ ಆರಂಭದಿಂದ ಸುತ್ತಮುತ್ತಲಿನ ಏಳು ಜಿಲ್ಕೆಗಳ ಜನರಿಗೆ ಅನುಕೂಲವಾಗಲಿದೆ. ಇದಲ್ಲದೇ ಬೆಳಗಾವಿ ಗಡಿ ಜಿಲ್ಲೆಯಾಗಿರುವುದರಿಂದ ನೆರೆಯ ರಾಜ್ಯಗಳ ಜನರಿಗೂ ಇದರಿಂದ ಪ್ರಯೋಜನ ಆಗಲಿದೆ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ ಅವರು ಪತ್ರಿಕಾಹೋಷ್ಠಿಯಲ್ಲಿ ತಿಳಿಸಿದರು.

130 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಆರಂಭಗೊಂಡ ಬಳಿಕ ಯಾವುದೇ ರೀತಿಯ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ನಿರಂತರ ಪ್ರಯತ್ನ ಮುಂದುವರಿಸಲಾಗುವುದು. ಆರೋಗ್ಯ ಕ್ಷೇತ್ರದ ಬೆಳವಣಿಗೆಯಿಂದ ಶಿಕ್ಷಣ ಮತ್ತು ವ್ಯಾಪಾರಕ್ಕೆ ಕೂಡ ಅನುಕೂಲವಾಗಲಿದೆ ಎಂದರು.

ಈ ಭಾಗಕ್ಕೆ ಆಸ್ಪತ್ರೆ ಮಂಜೂರು ಮಾಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಮುಂಬರುವ ದಿನಗಳಲ್ಲಿ ಸೆಮಿಕಂಡಕ್ಟರ್ ಘಟಕವನ್ನು ಕೂಡ ಆರಂಭಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ‌.ಜಿ.ಹಿರೇಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button