ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕಿನ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಈ ಎರಡೂ ತಾಲ್ಲೂಕುಗಳಿಗೆ ಅವರು ಶುಕ್ರವಾರ(ಏ.2) ಭೇಟಿ ನೀಡಿದರು. ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್ ಗಳ ಭದ್ರತೆ ಕುರಿತು ಈ ಸಂದರ್ಭದಲ್ಲಿ ಪರಿಶೀಲಿಸಿದರು. ಅರಭಾಂವಿ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೂಡಲಗಿಯ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾಗುವ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದರು.
ಅದೇ ರೀತಿ ಗೋಕಾಕ ವಿಧಾನಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಗೋಕಾಕ ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಕೇಂದ್ರದ ಸಿದ್ಧತೆ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಚುನಾವಣೆಗೆ ನಿಯೋಜನೆಗೊಂಡಿರುವ ಸಿಬ್ಬಂದಿಗೆ ಸಮರ್ಪಕ ತರಬೇತಿಯನ್ನು ನೀಡಬೇಕು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೋಕಾಕ ಹಾಗೂ ಅರಭಾವಿ ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು ಮತ್ತು ತಹಶೀಲ್ದಾರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದೇ ರೀತಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ಎಸ್. ಅವರು ಕೂಡ ರಾಮದುರ್ಗ, ಸವದತ್ತಿ ಮತ್ತು ಬೈಲಹೊಂಗಲ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿದರು.
ಅರಬಾವಿ, ಗೋಕಾಕ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸತೀಶ್ ಜಾರಕಿಹೊಳಿ ಭರ್ಜರಿ ಮತಬೇಟೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ