ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಮಾದರಿ ನೀತಿ ಸಂಹಿತೆಯನ್ನು ಜಾರಿಗೆ ತರಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಒಂದು ವೇಳೆ ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಸೂಚನೆ ನೀಡಿದರು.
ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ (ಮಾ.23) ನಡೆದ ತಹಶಿಲ್ದಾರರ ಜತೆಗಿನ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಮತಗಟ್ಟೆಗಳನ್ನು ಸ್ಥಾಪನೆ ಜತೆಗೆ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಎಲ್ಲ ಮೂಲಸೌಕರ್ಯಗಳನ್ನು ಒದಗಿಸುವುದು ಸಂಬಂಧಿಸಿದ ಅಧಿಕಾರಿಗಳ ಜವಾಬ್ದಾರಿಯಾಗಿದೆ. ದೋಷರಹಿತ ಮತದಾರರ ಪಟ್ಟಿ ಪ್ರಕಟಿಸುವುದು; ಯಾವುದೇ ಅರ್ಹ ಮತದಾರರ ಹೆಸರು ತಪ್ಪದಂತೆ ಎಚ್ಚರಿಕೆ ವಹಿಸಬೇಕು.
ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕು. ಈಗಾಗಲೇ ಅನೇಕ ರೀತಿಯ ತರಬೇತಿಗಳನ್ನು ನೀಡಲಾಗಿದೆ. ಆದಾಗ್ಯೂ ಇನ್ನಷ್ಟು ತರಬೇತಿ ಅಗತ್ಯವಿದ್ದರೆ ನೀಡಬೇಕು.
ಚುನಾವಣೆ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಮತ್ತು ಮಾದರಿ ನೀತಿಸಂಹಿತೆ ಉಲ್ಲಂಘನೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಬಕಾರಿ, ವಾಣಿಜ್ಯ, ಆದಾಯ ತೆರಿಗೆ ಇಲಾಖೆಯ ನೋಡಲ್ ಅಧಿಕಾರಿಗಳು, ಎಫ್.ಎಸ್.ಟಿ., ಎಸ್.ಎಸ್.ಟಿ., ವಿ.ಎಸ್.ಟಿ., ವಿ.ವಿ.ಟಿ, ಸೇರಿದಂತೆ ವಿವಿಧ ಸಮಿತಿಯ ಅಧಿಕಾರಿಗಳು ಸೇರಿದಂತೆ ವಿವಿಧ ತಂಡಗಳು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು.
ಚುನಾವಣಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.
ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ಎಸ್. ಸೇರಿದಂತೆ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ವಿವಿಧ ತಂಡಗಳ ನೋಡಲ್ ಅಧಿಕಾರಿಗಳು ಹಾಗೂ ಉಪ ಚುನಾವಣೆ ನಡೆಯುತ್ತಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಹಶೀಲ್ದಾರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ