*ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ, ದ್ವಿಚಕ್ರ ವಾಹನ ಬೆಂಕಿಗಾಹುತಿ*

ಮಾಸ್ತಮರ್ಡಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳಕರ್‌ರಿಂದ ಆರ್ಥಿಕ ನೆರವು
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮಾಸ್ತಮರ್ಡಿ ಗ್ರಾಮದ ಬಸವ್ವ ದುಂಡಪ್ಪ ಮಾವಿನಕಟ್ಟಿ ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಸಂಪೂರ್ಣ ಮನೆ, ದ್ವಿಚಕ್ರ ವಾಹನ ಹಾಗೂ ಪ್ರಮುಖ ದಾಖಲೆಗಳು ಸುಟ್ಟುಹೋಗಿರುವ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ನೆರವು ನೀಡಿದರು.
ಮಾಸ್ತಮರ್ಡಿ ಗ್ರಾಮಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಬೆಂಕಿ ಅವಘಡದಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿ, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ಸಂಕಷ್ಟದ ಸಂದರ್ಭದಲ್ಲಿ ಕುಟುಂಬದೊಂದಿಗೆ ನಿಂತು ಸಾಂತ್ವನ ಹೇಳಿದರು.

‘ಲಕ್ಷ್ಮೀತಾಯಿ ಫೌಂಡೇಶನ್’ ವತಿಯಿಂದ ತಕ್ಷಣದ ಪರಿಹಾರವಾಗಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದರು. ಅಲ್ಲದೆ, ಸರ್ಕಾರದ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ದೊರೆಯಬೇಕಾದ ಸೂಕ್ತ ಪರಿಹಾರವನ್ನು ಶೀಘ್ರವಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, “ಕಷ್ಟದಲ್ಲಿರುವ ಕುಟುಂಬಕ್ಕೆ ಆಸರೆಯಾಗುವುದು ನಮ್ಮ ಕರ್ತವ್ಯ. ಆಕಸ್ಮಿಕವಾಗಿ ಸಂಭವಿಸಿದ ಈ ದುರ್ಘಟನೆಯಿಂದ ಬಸವ್ವ ಅವರ ಕುಟುಂಬಕ್ಕೆ ಅಪಾರ ನಷ್ಟವಾಗಿದೆ. ಈ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.
ಅವಘಡದಿಂದ ಮನೆ ಹಾಗೂ ಅಗತ್ಯ ವಸ್ತುಗಳನ್ನು ಕಳೆದುಕೊಂಡಿರುವ ಕುಟುಂಬಕ್ಕೆ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಮುಂದಿನ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

