ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ನಡೆಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಇಎಸ್ ಕಾರ್ಯಕರ್ತರ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಎಂಇಎಸ್ ಕಾರ್ಯಕರ್ತರಿಗೆ ಕರಾಳ ದಿನಾಚರಣೆ ಮೆರವಣಿಗೆ ನಡೆಸದಂತೆ ಖಡಕ್ ಆದೇಶ ನೀಡಿದ್ದರು. ಆದಾಗ್ಯೂ ಮರಾಠಾ ಮಂದಿರದಲ್ಲಿ ಎಂಇಎಸ್ ಸಭೆ ಸೇರಿದ್ದು, ಪ್ರಚೋದನಕಾರಿ ಭಾಷಣ ಮಾಡುತ್ತಿದ್ದರು. ಜಿಲ್ಲಾಡಳಿತ ಕರಾಳ ದಿನಾಚರಣೆ ಮೆರವಣಿಗೆಗೆ ಅನುಮತಿ ನೀಡಿಲ್ಲ. ಆದರೆ ಮಹಾರಾಷ್ಟ್ರ ಸರ್ಕಾರ ಹಾಗೂ ಜನರು ನಮಗೆ ಬೆಂಬಲ ನೀಡಿದ್ದಾರೆ ಎಂದು ಎಂಇಎಸ್ ಕರಾಳ ದಿನಾಚರಣೆಗೆ ಮುಂದಾಗಿದೆ.
ಎಂಇಎಸ್ ಗೆ ಸಭೆ ನಡೆಸಲು ಅನುಮತಿ ನೀಡಿಲ್ಲ ಎಂದು ಜಿಲ್ಲಾಡಳಿತ ಹಾಗೂ ಪೊಲೀಸರು ಹೇಳುತ್ತಿದ್ದಾರೆ. ಆದರೆ ಮರಾಠ ಮಂದಿರದಲ್ಲಿ ಎಂಇಎಸ್ ಕರಾಳ ದಿನಾಚರಣೆ ಸಭೆ ನಡೆಸುತ್ತಿದೆ. ಜಿಲ್ಲಾಡಳಿತ ಹಾಗೂ ಪೊಲೀಸರು ಎಂಇಎಸ್ ಸಭೆಗೆ ಅವಕಾಶ ನೀಡಿರುವುದು ಖಂಡನೀಯ ಎಂದು ಕನ್ನಡಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಎಂಇಎಸ್ ಸಭೆ ನಡೆಸುತ್ತಿದ್ದ ಮರಾಠಾ ಮಂದಿರಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪೊಲೀಸರು ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ