ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಡಿಪಾಯವನ್ನು ಹಾಕಿಕೊಂಡಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಸ್ಥಾನಗಳನ್ನು ಗಳಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಹೊರಗಿನವರಿಗೆ ಕಾಂಗ್ರೆಸ್ ಪಕ್ಷ ಹಿನ್ನಡೆ ಅನುಭವಿಸಿದೆ ಎಂಬಂತೆ ಬಿಂಬಿತವಾಗಿದೆ. ಆದರೆ, ನಮ್ಮ ನಿರೀಕ್ಷೆಗೆ ತಕ್ಕಷ್ಟೇ ಸ್ಥಾನಗಳನ್ನು ನಾವು ಚುನಾವಣೆಯಲ್ಲಿ ಗಳಿಸಿದ್ದೇವೆ ಎಂದರು.
ದಕ್ಷಿಣ ವಿಧಾನಸಭಾ ಮತಕ್ಷೇತ್ರದಲ್ಲಿ ನಮಗೆ ಹಿನ್ನಡೆಯಾಗಿದೆ. ಅಲ್ಲಿ ಇನ್ನೂ ಕೆಲವು ಸ್ಥಾನಗಳು ಬರಬೇಕಾಗಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಡಿಪಾಯ ಹಾಕಿಕೊಂಡಿದೆ. ಮುಂಬರುವ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನೂತನವಾಗಿ ಆಯ್ಕೆಯಾಗಿರುವ ಸದಸ್ಯರು 5 ವರ್ಷದಲ್ಲಿ ಉತ್ತಮವಾಗಿ ಸೇವೆ ಮಾಡಿ, ನಗರದ ಅಭಿವೃದ್ಧಿಗೆ ಶ್ರಮಿಸಬೇಕು. ಜೊತೆಗೆ ಪಕ್ಷ ಸಂಘಟನೆಯನ್ನು ಮಾಡಬೇಕು. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಯಶಸ್ಸಿಗೆ ಎಲ್ಲರೂ ಒಗ್ಗಟ್ಟಾಗಿ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಆರ್. ದ್ರುವ್ ನಾರಾಯಣ, ಶಾಸಕರಾದ ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಮಾಜಿ ಶಾಸಕರಾದ ಫಿರೋಜ್ ಸೇಠ್, ಅಶೋಕ ಪಟ್ಟಣ, ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ್ ಸೇರಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಅಕ್ಟೋಬರ್ 2ರಂದು ಎಲ್ಲಾ ಗ್ರಾಮ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಕಾಂಗ್ರೆಸ್ ಸಭೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ