ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ತೀವ್ರ ಕಗ್ಗಂಟಾಗಿದ್ದ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷನೇಮಾಕ ಮಾಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾಗಿ ಸತೀಶ ಜಾರಕಿಹೊಳಿ ನೇಮಕವಾಗಿದ್ದಾರೆ. ಈ ಮೂಲಕ ಜಾಕಿಹೊಳಿ ಸಹೋದರರು ಕಾಂಗ್ರೆಸ್, ಬಿಜೆಪಿಯಲ್ಲಿ ತಮ್ಮ ಪ್ರಾಬಲ್ಯ ಸಾಧಿಸಿದ್ದಾರೆ.
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಸಚಿವ ರಮೇಶ ಜಾರಕಿಹೊಳಿ ಬಿಜೆಪಿಗೆ ಸೇರ್ಪಡೆಯಾಗಿ ಜಲಸಂಪನ್ಮುಲ ಸಚಿವರಾಗಿ ಆಯ್ಕೆಯಾಗಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಸಹೋದರ ಸತೀಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
1992ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಸತೀಶ್, ವಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. 1998, 2005ರಲ್ಲಿ ಸತತ ಎರಡು ಭಾರಿ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಾರೆ. ಕ್ಷೇತ್ರ ಪುನರ್ ವಿಂಗಡನೆ ಬಳಿಕ ಯಮಕನಮರಡಿ ಎಸ್ಟಿ ಮೀಸಲು ಕ್ಷೇತ್ರದಿಂದ 2008, 2013 ಹಾಗೂ 2018ರಲ್ಲಿ ಸತತ ಮೂರು ಸಲ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. 2018ರ ಸಾರ್ವತ್ರಿಕ ಚುನಾವಣೆ ಮೊದಲು ಎಐಸಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಜತೆಗೆ ತೆಲಂಗಾಣ ಉಸ್ತುವಾರಿಯನ್ನು ಸಹ ವಹಿಸಿಕೊಂಡಿದ್ದರು. ಆದರೆ ಸಂಪುಟದಲ್ಲಿ ಸ್ಥಾನ ಪಡೆಯಲು ಹಾಗೂ ಬೆಂಬಲಿಗರಿಗೆ ಸ್ಥಾನಮಾನ ಕೊಡಿಸುವಲ್ಲಿ ವಿಫಲರಾದ ಬಳಿಕ ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಸತೀಶ್ ಜಾರಕಿಹೊಳಿ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎನ್ನುವ ಮಹದಾಸೆ ಹೊಂದಿದ್ದು, ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ಸಿಕ್ಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ