*ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಬೆಳಗಾವಿಗೆ ಆಗಮಿಸಲಿದ್ದಾರೆ ಸಿಎಂ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ನಗರ ಬಸ್ ನಿಲ್ದಾಣ ಉದ್ಘಾಟನೆ ಮತ್ತು ಕೆಲವು ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ತಿಂಗಳು ಬೆಳಗಾವಿಗೆ ಆಗಮಿಸುತ್ತಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.
ಇಂದು ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊಸ ಜಿಲ್ಲಾಧಿಕಾರಿ ಕಚೇರಿ, ಮೇಲ್ಸೇತುವೆ, ಜಿಲ್ಲಾ ಕ್ರೀಡಾಂಗಣ, ಸಾಂಬ್ರಾ ವಿಮಾನ ನಿಲ್ದಾಣವರೆಗೆ ಚತುಷ್ಪಥ ರಸ್ತೆ, ನೀರಾವರಿ ಯೋಜನೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇವೆ. ಈ ಕಾರ್ಯಕ್ರಮಗಳ ಆರಂಭಕ್ಕೆ ಸಿಎಂ ಆಗಮಿಸಲಿದ್ದಾರೆ ಎಂದರು.
ಜಿಲ್ಲಾ ವಿಭಜನೆ ಆಗಬೇಕು ಎಂಬುದು ನಮ್ಮ ಅಭಿಪ್ರಾಯ. ಹಿಂದೆ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಕೈಗೊಂಡ ನಿರ್ಧಾರದಂತೆ ಹೊಸದಾಗಿ ಚಿಕ್ಕೋಡಿ ಮತ್ತು ಗೋಕಾಕ್ ಜಿಲ್ಲೆ ಆಗಬೇಕು. ಅದು ಯಾವಾಗ ಕಾರ್ಯಗತವಾಗುತ್ತದೆ ಎಂಬುದು ಗೊತ್ತಿಲ್ಲ ಎಂದ ಅವರು, ಗೋಕಾಕ್ ಮತ್ತು ಚಿಕ್ಕೋಡಿಯಲ್ಲಿ ಜಿಲ್ಲಾಸ್ಪತ್ರೆ ನಿರ್ಮಿಸುವ ಯೋಜನೆ ಇದೆ. ಇದರಿಂದ ಆ ಭಾಗದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲ ಆಗಲಿದೆ ಎಂದು ಹೇಳಿದರು.