*ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ನವೀಕರಣ ಕಾಮಗಾರಿ: ಸಚಿವ ಸತೀಶ್ ಜಾರಕಿಹೊಳಿ ಖುದ್ದಾಗಿ ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ನವೀಕರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಖುದ್ದಾಗಿ ವೀಕ್ಷಿಸಿ, ಪರಿಶೀಲನೆ ನಡೆಸಿದರು.
ಕಚೇರಿ ಆವರಣದ ಸೌಂದರ್ಯೀಕರಣ ಮತ್ತು ಸಾರ್ವಜನಿಕ ಸೌಲಭ್ಯಗಳ ವೃದ್ಧಿಗೆ ಸರ್ಕಾರ ಆದ್ಯತೆ ನೀಡಿದ್ದು, ಕಾಮಗಾರಿಗಳನ್ನು ಗುಣಮಟ್ಟದಿಂದ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಲ್ಮಿಡಿ ಶಾಸನದ ಪ್ರತಿಕೃತಿ ವೀಕ್ಷಣೆ
ಇದೇ ಸಂದರ್ಭದಲ್ಲಿ ಕಚೇರಿ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ನೂತನ ಧ್ವಜ ಸ್ತಂಭದ ಕಾಮಗಾರಿಯನ್ನು ಸಚಿವರು ವೀಕ್ಷಿಸಿದರು. ಅಷ್ಟೇ ಅಲ್ಲದೆ, ಕನ್ನಡದ ಹೆಮ್ಮೆಯ ಸಂಕೇತವಾಗಿ ಆವರಣದಲ್ಲಿ ಸ್ಥಾಪಿಸಲಾಗಿರುವ ಐತಿಹಾಸಿಕ ‘ಹಲ್ಮಿಡಿ ಶಾಸನದ ಪ್ರತಿಕೃತಿ’ಯ ಸದ್ಯದ ಸ್ಥಿತಿಗತಿ ಹಾಗೂ ಅದರ ಸಂರಕ್ಷಣೆಯ ಕುರಿತು ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್‌ಗಳು ಮತ್ತು ಜಿಲ್ಲಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಸುಸಜ್ಜಿತ ರಸ್ತೆ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿದಿನ ನೂರಾರು ಸಾರ್ವಜನಿಕರು ಬಂದು ಹೋಗುವುದರಿಂದ, ಅವರಿಗೆ ಯಾವುದೇ ತೊಂದರೆಯಾಗದಂತೆ ಸಮಗ್ರ ಆವರಣ ಯೋಜನೆಯನ್ನು ರೂಪಿಸಲಾಗಿದೆ. ಕಚೇರಿ ಆವರಣದಲ್ಲಿ ಸುಸಜ್ಜಿತ ರಸ್ತೆಗಳ ನಿರ್ಮಾಣ ಹಾಗೂ ಸಾರ್ವಜನಿಕರ ವಾಹನಗಳ ನಿಲುಗಡೆಗಾಗಿ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರು ಸಚಿವರಿಗೆ ನಕ್ಷೆಯ ಮೂಲಕ ವಿವರಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ರಾಹುಲ್ ಶಿಂಧೆ, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ. ರಾಮರಾಜನ್ ಹಾಗೂ ಲೋಕೋಪಯೋಗಿ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.



