*ಸೋನಂ ವಾಂಗ್ಚುಕ್ ಹೋರಾಟ ಬೆಂಬಲಿಸಿ ಬೆಳಗಾವಿಯಲ್ಲಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನೀಟ್ ಪರೀಕ್ಷೆಯ ಅಕ್ರಮ ವಿರೋಧಿಸಿ ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಹೋರಾಟವನ್ನು ಬೆಂಬಲಿಸಿ ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಗಾವಿ ನಾಗರಿಕರ ಸಂಘಟನೆಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರ ಅಂಬೇಡ್ಕರ್ ಉದ್ಯಾನದಿಂದ ಜಿಲ್ಲಾಕಾರಿ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನೀಟ್-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ, ಉಪವಾಸ ನಿರತ ಸೋನಂ ವಾಂಗ್ಚುಕ್ ಅವರೊಂದಿಗೆ ಕೇಂದ್ರ ಸರ್ಕಾರ ಪ್ರಜಾತಾಂತ್ರಿಕ ಸಂವಾದ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ವೈದ್ಯಕೀಯ ಪ್ರವೇಶಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡುತ್ತಿದ್ದರೂ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪಾರದರ್ಶಕತೆ ಕಾಪಾಡುವಲ್ಲಿ ವಿಫಲವಾಗಿದೆ. ಪರೀಕ್ಷಾ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಂದ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ವಿದ್ಯಾರ್ಥಿಗಳ ಆತಂಕ ನಿವಾರಣೆಗೆ ಸರಕಾರ ವಿಶ್ವಾಸಾರ್ಹ ಕ್ರಮ ಕೈಗೊಳ್ಳಬೇಕು. ಕಳೆದ ಕೆಲವು ವರ್ಷಗಳಲ್ಲಿ ಎನ್‌ಟಿಎ ನಡೆಸಿದ ಪರೀಕ್ಷೆಗಳಲ್ಲಿ ಅಕ್ರಮಗಳು ಮರುಕಳಿಸುತ್ತಿವೆ. ಹೀಗಾಗಿ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು. ಜತೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಅಲ್ಲದೇ ಸೋನಂ ವಾಂಗ್ಚುಕ್ ಸೇರಿದಂತೆ ಉಪವಾಸ ನಿರತ ಹೋರಾಟಗಾರರೊಂದಿಗೆ ಸರಕಾರ ತಕ್ಷಣ ಸಂವಾದ ನಡೆಸಿ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪರಿಸರವಾದಿ ಶಿವಾಜಿ ಕಾಗಣಿಕರ್, ಸುನೀತಾ ಪಾಟೀಲ, ಸುಜೀತ್ ಮುಳಗುಂದ ಸೇರಿ ಅನೇಕರು ಪಾಲ್ಗೊಂಡಿದ್ದರು.



