*ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ*

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಪ್ರದೇಶಗಳಲ್ಲಿ ಜಲಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೆರೆಗಳ ಪುನಶ್ಚೇತನ ಅತ್ಯಂತ ಮಹತ್ವದ ಕಾರ್ಯವಾಗಿದ್ದು, ಇದರಿಂದ ರೈತರು ಹಾಗೂ ಗ್ರಾಮಸ್ಥರಿಗೆ ದೀರ್ಘಕಾಲಿಕ ಪ್ರಯೋಜನ ದೊರೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಬೆನಕನಹಳ್ಳಿ ಪಟ್ಟಣ ಪಂಚಾಯಿತಿ, ಗ್ರಾಮದ ಪಂಚ ಕಮಿಟಿ ಹಾಗೂ ಕೆರೆ ಅಭಿವೃದ್ಧಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ 988ನೇ ಕೆರೆಯ ಬಾಗಿನ ಅರ್ಪಣೆ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾಮಫಲಕ ಅನಾವರಣಗೊಳಿಸಿ ಅವರು ಮಾತನಾಡಿದರು.

ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯಾದ್ಯಂತ ಜಲಸಂರಕ್ಷಣೆ, ಪರಿಸರ ಸಂರಕ್ಷಣೆ ಹಾಗೂ ಗ್ರಾಮೀಣಾಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಅಪಾರವಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಕೆರೆಗಳ ಪುನಶ್ಚೇತನದ ಮೂಲಕ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು, ಅಂತರ್ಜಲ ಮಟ್ಟ ವೃದ್ಧಿಸುವುದು ಮತ್ತು ಕೃಷಿ ಚಟುವಟಿಕೆಗಳಿಗೆ ಪೂರಕ ವಾತಾವರಣ ನಿರ್ಮಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೆರೆಗಳು ಕೇವಲ ನೀರಿನ ಸಂಗ್ರಹ ತಾಣಗಳಲ್ಲ. ಅವು ಗ್ರಾಮೀಣ ಬದುಕಿನ ಜೀವನಾಡಿಯಾಗಿವೆ. ಕೆರೆಗಳಲ್ಲಿ ನೀರು ಸಂಗ್ರಹವಾದರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚುತ್ತದೆ. ಇದರಿಂದ ಬಾವಿ, ಕೊಳವೆಬಾವಿಗಳಲ್ಲಿ ನೀರಿನ ಲಭ್ಯತೆ ಸುಧಾರಿಸುವುದರ ಜತೆಗೆ ಕೃಷಿ ಹಾಗೂ ಜನ-ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆಗೂ ಪರಿಹಾರ ದೊರೆಯುತ್ತದೆ. ಹೀಗಾಗಿ ಕೆರೆಗಳ ಸಂರಕ್ಷಣೆ ಮತ್ತು ನಿರ್ವಹಣೆಯನ್ನು ಪ್ರತಿಯೊಂದು ಗ್ರಾಮದ ಜನರು ತಮ್ಮ ಜವಾಬ್ದಾರಿಯೆಂದು ಪರಿಗಣಿಸಬೇಕು ಎಂದು ಕರೆ ನೀಡಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಸುಮಾರು 12 ಕೋಟಿ ರೂ. ವೆಚ್ಚದಲ್ಲಿ 40ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಿಂದ ಈ ಭಾಗದ ಕೆರೆಗಳಲ್ಲಿ ನೀರಿನ ಸಂಗ್ರಹ ಹೆಚ್ಚಿಸುವುದರ ಜತೆಗೆ ರೈತರಿಗೆ ಅನುಕೂಲ ಕಲ್ಪಿಸುವ ಪ್ರಯತ್ನ ಮಾಡಲಾಗಿದೆ. ಗ್ರಾಮೀಣ ಭಾಗದ ಕೃಷಿ ಚಟುವಟಿಕೆಗಳಿಗೆ ನೀರಿನ ಭದ್ರತೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೆನಕನಹಳ್ಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿರುವುದರಿಂದ ಈ ಭಾಗದ ಅಭಿವೃದ್ಧಿಗೆ ಹೊಸ ವೇಗ ದೊರೆತಿದೆ. ಪಟ್ಟಣ ಪಂಚಾಯಿತಿಗೆ ಸುಮಾರು 20 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಪಟ್ಟಣ ಪಂಚಾಯಿತಿಯಾಗಿ ರೂಪುಗೊಂಡ ನಂತರ ಈ ಭಾಗದ ಅಭಿವೃದ್ಧಿ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಿದ್ದು, ರೈತರ ಜಮೀನುಗಳ ಮೌಲ್ಯವೂ ದ್ವಿಗುಣಗೊಂಡಿದೆ ಎಂದು ಹೇಳಿದರು.
ಕೆರೆಗಳ ಅಭಿವೃದ್ಧಿ, ಮೂಲಸೌಕರ್ಯಗಳ ವಿಸ್ತರಣೆ ಹಾಗೂ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಇವೆಲ್ಲವೂ ಗ್ರಾಮೀಣ ಪ್ರದೇಶಗಳ ಸಮಗ್ರ ಪ್ರಗತಿಗೆ ಪೂರಕವಾಗಿವೆ. ಸರ್ಕಾರದ ಯೋಜನೆಗಳ ಜತೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಂತಹ ಸಂಸ್ಥೆಗಳು ಹಾಗೂ ಸ್ಥಳೀಯ ಸಮಿತಿಗಳು ಕೈಜೋಡಿಸಿದಾಗ ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯವಾಗುತ್ತದೆ. ಪುನಶ್ಚೇತನಗೊಂಡಿರುವ ಈ ಕೆರೆಯನ್ನು ಗ್ರಾಮಸ್ಥರು ಜವಾಬ್ದಾರಿಯಿಂದ ಕಾಪಾಡಿಕೊಂಡು, ಮುಂದಿನ ಪೀಳಿಗೆಗೂ ಜಲಸಂಪತ್ತನ್ನು ಉಳಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಹರಿ ಗುರೂಜಿ ಮಹಾರಾಜರು ಆಶೀರ್ವಚನ ನೀಡಿದರು. ಗ್ರಾಮದ ಪಂಚ ಕಮಿಟಿ ಅಧ್ಯಕ್ಷ ಪ್ರಭಾಕರ ದೇಸೂರಕರ, ಯುವರಾಜ ಕದಂ, ಬಾಳು ದೇಸೂರಕರ್, ಮನೋಹರ್ ಬೆಳಗಾಂವ್ಕರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ದಯಾಶೀಲ, ಡಾ. ಜಿ.ಆರ್. ಸೋನೇರ, ಸತೀಶ ನಾಯ್ಕ, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



