CrimeKannada NewsKarnataka NewsLatest

*ಕೈಕಾಲು ಕಟ್ಟಿ ರಸ್ತೆಯಲ್ಲೇ ಬೆಂಕಿ ಹಚ್ಚಿದ ದುಷ್ಕರ್ಮಿಗಳು*: *ಸಾವು ಬದುಕಿನ ನಡುವೆ ಹೋರಾಡಿದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ನಗರದಲ್ಲಿ ಬೆಚ್ಚಿಬೀಳಿಸುವ ಕೃತ್ಯವೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳು ಆತನನ್ನು ನಡು ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಸುಟ್ಟ ಗಾಯಗಳಿಂದ ನರಳುತ್ತಿದ್ದ ವ್ಯಕ್ತಿ ರಸ್ತೆಯ ಪಕ್ಕದಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪಾದರಾಯನಪುರದ ನಿವಾಸಿ ಮಹಮ್ಮದ್ ಗಾಯಾಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಗಿರಿನಗರದ ವೀರಭದ್ರ ಸಿಗ್ನಲ್ ಬಳಿ ಬೆಳಗ್ಗೆ ಸುಮಾರು 6.30ರ ವೇಳೆಗೆ ಈ ಘಟನೆ ನಡೆದಿದೆ. ಯುವಕರ ಗುಂಪೊಂದು ಮಹಮ್ಮದ್‌ನ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ. ವ್ಯಕ್ತಿ ಬಿದ್ದಿದ್ದ ಜಾಗದ ಪಕ್ಕದಲ್ಲೇ ನಿರ್ಜನ ಪ್ರದೇಶವಿದ್ದು, ಅಲ್ಲಿಂದ ಕೆಳಕ್ಕೆ ತಳ್ಳಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಗಾಯಾಳು ಮಹಮ್ಮದ್‌ನನ್ನು ಪೊಲೀಸರು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶೇಕಡಾ 70ರಷ್ಟು ಸುಟ್ಟ ಗಾಯಗಳಾಗಿರುವುದಾಗಿ ವೈದ್ಯಕೀಯ ಮಾಹಿತಿ ಲಭ್ಯವಾಗಿದೆ. ಘಟನೆ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಡಾ. ಕೆ. ವಂಶಿಕೃಷ್ಣ ಮಾಹಿತಿ ನೀಡಿದ್ದು, ಬೆಳಗ್ಗೆ 6.30ರ ಸುಮಾರಿಗೆ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದಾಗ ವ್ಯಕ್ತಿ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು, ಗುಡ್ಡದ ಮೇಲೆ ಕೆಲವರು ಗಾಂಜಾ ಸೇವಿಸಿರುವುದು ಪತ್ತೆಯಾಗಿದೆ. ಅಲ್ಲಿಂದಲೇ ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಸಾಧ್ಯತೆಯಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

Related Articles

Back to top button