ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ಶಾಲೆಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಬಸವೇಶ್ವರ ನಗರ, ಯಲಹಂಕ, ಸದಾಶಿವನಗರ ಸೇರಿದಂತೆ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಏಕಕಾಲದಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸದ ಎದುರಿರುವ ನೀವ್ ಅಕಾಡೆಮಿ ಸ್ಕೂಲ್ ಗೂ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಷಯ ತಿಳಿಯುತ್ತಿದ್ದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಶಾಲೆಗೆ ತೆರಳಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಎಂದು ಮಾಧ್ಯಮಗಳಲ್ಲಿ ಸುದ್ದಿ ನೋಡುತ್ತಿದ್ದಂತೆ ನನಗೂ ಗಾಬರಿಯಾಯಿತು. ನಮ್ಮ ಮನೆಯ ಎದುರಿರುವ ಶಾಲೆಗೂ ಬೆದರಿಕೆ ಕರೆ ಬಂದಿದೆ. ಹಾಗಾಗಿ ಖುದ್ದು ತೆರಳಿ ಪರಿಶೀಲನೆ ನಡೆಸಿದ್ದೇನೆ. ಪೊಲೀಸ್ ಆಯುಕ್ತ ದಯಾನಂದ್ ಅವರಿಂದಲೂ ಮಾಹಿತಿ ಪಡೆದಿದ್ದೇನೆ ಎಂದರು.
ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ. ಇದು ಹುಸಿ ಬಾಂಬ್ ಬೆದರಿಕೆ ಕರೆಯಾಗಿದೆ. ಪೊಲೀಸರು ಎಲ್ಲಾ ರೀತಿಯ ತನಿಖೆ ನಡೆಸಲಿದ್ದಾರೆ. ಬೆಂಗಳೂರು ನಗರದ ಜನತೆ ಆತಂಕ ಪಡುವ ಅಗತವಿಲ್ಲ. ಮಕ್ಕಳು, ಪೋಷಕರು ಗಾಬರಿ ಪಡಬೇಕಿಲ್ಲ ಎಂದು ತಿಳಿಸಿದರು.
ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಶಾಲಾ ಮಕ್ಕಳನ್ನು ವಾಪಾಸ್ ಮನೆಗೆ ಕಳುಹಿಸಲಾಗಿದ್ದು, ಬೆಂಗಳೂರಿನ ಬಹುತೇಕ ಶಾಲೆಗಳಿಗೆ ರಜೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ