Kannada NewsKarnataka NewsLatest

*ಕಾರಿನಲ್ಲಿ ಬರೋಬ್ಬರಿ 9 ಕೋಟಿ ರೂಪಾಯಿ ಹಣ ಪತ್ತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರಿನಲ್ಲಿ ಬರೋಬ್ಬರಿ 9 ಕೋಟಿ ಹಣ ಪತ್ತೆಯಾಗಿದೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.

ಆಗಸ್ಟ್ 18ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಈ ಹಣವನ್ನು ಜಪ್ತಿ ಮಾಡಲಾಗಿದೆ. ಕಾರಿನಲ್ಲಿ ಅಕ್ರಮವಾಗಿ 9 ಕೋಟಿ ರೂಪಾಯಿ ನಗದನ್ನು ಸಾಗಿಸಲಾಗುತ್ತಿತ್ತು. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ.

ಐಟಿ ಅಧಿಕಾರಿಗಳಿಂದ ಬಂದ ಖಚಿತ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದರು. ತಪಾಸಣೆ ವೇಳೆ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ಪೊಲೀಸರು ಹಣ ಹಾಗೂ ಕಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ನಗದು ತಮಿಳುನಾಡಿನ ತೂತುಕುಡಿಯ ಸಿಂಧು ಜ್ಯುವೆಲ್ಲರ್ಸ್ ಮಾಲೀಕ ಸಚಿನ್‌ಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿದೆ.

ಬಳಿಕ ಸಚಿನ್‌ನನ್ನು ಪೊಲೀಸರು ಆದಾಯ ತೆರಿಗೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಚಿನ್ ನಿವಾಸದಲ್ಲೂ ಪರಿಶೀಲನೆ ನಡೆಸಿದ್ದು, ಅಲ್ಲಿ 1.3 ಕೋಟಿ ರೂ. ನಗದು ಪತ್ತೆಯಾಗಿದೆ. ಜಪ್ತಿಯಾದ 9 ಕೋಟಿ ರೂ. ಹಾಗೂ ಮನೆಯಲ್ಲಿ ಸಿಕ್ಕ 1.3 ಕೋಟಿ ರೂ. ಹಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button