Kannada NewsKarnataka NewsLatest

*ಬೆಂಗಳೂರಿನಲ್ಲಿ ಮತ್ತೆ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಭಾರಿ ಪ್ರಮಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.

ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

Home add -Advt

ಕಾಡ ಅಗ್ರಹಾರದ ನಿವಾಸಿ ವೆಂಕಟರಾಮ ರೆಡ್ಡಿ ಎಂಬಾತನ ಬಳಿ ಈ ಸ್ಫೋಟಕಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಒಟ್ಟು 50 ಡಿಟೋನೇಟರ್ ಕಡ್ಡಿಗಳು ಹಾಗೂ 225 ಜಿಲೆಟಿನ್ ಕಡ್ಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಜಮೀನಿನಲ್ಲಿ ಬಂಡೆಗಳನ್ನು ಒಡೆಯಲು ಈ ಸ್ಫೋಟಕಗಳನ್ನು ತರಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಪರವಾನಗಿ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ದಾಸ್ತಾನು ಮಾಡಿದ್ದೇಕೆ ಎಂಬ ಬಗ್ಗೆ ಅವಲಹಳ್ಳಿ ಠಾಣೆ ಪೊಲೀಸರು ತೀವ್ರ ತನಿಖೆ ಮುಂದುವರಿಸಿದ್ದಾರೆ.

ಕೇವಲ ಬಂಡೆ ಹೊಡೆಯಲು ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಲಾಗಿತ್ತೇ ಅಥವಾ ಬೇರೆ ಕಾರಣ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಸ್ಫೋಟಕಗಳ ಕಾಯಿದೆ, 1884 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ ಇದೀಗ ಅವಲಹಳ್ಳಿಯಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

Related Articles

Back to top button