Kannada NewsKarnataka NewsLatest

*ಭೀಮಣ್ಣ ಖಂಡ್ರೆ ನಿಧನ*

ಪ್ರಗತಿವಾಹಿನಿ ಸುದ್ದಿ, ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನರಾಗಿದ್ದಾರೆ. ಅವರಿಗೆ 102 ವರ್ಷ ವಯಸ್ಸಾಗಿತ್ತು.

ಹಾಲಿ ಸಚಿವ ಈಶ್ವರ್ ಖಂಡ್ರೆ ಅವರ ತಂದೆಯವರಾಗಿದ್ದ ಭೀಮಣ್ಣ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಕಳೆದ ಹಲವಾರು ದಿನಗಳಿಂದ ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸ್ವಲ್ಪ ದಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತಾದರೂ ನಂತರದಲ್ಲಿ ಮನೆಯಲ್ಲಿಯೇ ಉಪಚಾರ ಮುಂದುವರಿಸಲಾಗಿತ್ತು.

ಶುಕ್ರವಾರ ರಾತ್ರಿ ಬಾಲ್ಕಿಯ ಸ್ವಗ್ರಹದಲ್ಲಿ ಅವರು ಕೊನೆಯುಸಿರೆಳೆದರು. ಶನಿವಾರ ಸಂಜೆ 5 ಗಂಟೆಗೆ ಬಾಲ್ಕಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

Home add -Advt

ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.

ಸಂಪುಟ ಸಹದ್ಯೋಗಿಗಳಾದ ಮಾನ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರದ ಸಚಿವರಾದ ಈಶ್ವರ್ ಖಂಡ್ರೆ ಅವರ ತಂದೆಯವರಾದ ಡಾ. ಭೀಮಣ್ಣ ಖಂಡ್ರೆ ಅವರು, ನಮ್ಮ ಸಮಾಜದ ಹಿರಿಯ ಮುಖಂಡರಾಗಿದ್ದರು. ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು. ನಮಗೆಲ್ಲ ಮಾರ್ಗದರ್ಶಕರಾಗಿದ್ದರು. ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು ಎಂದು ಹೇಳಿದ್ದಾರೆ.

ಡಾ. ಭೀಮಣ್ಣ ಅವರು ಹೈದ್ರಾಬಾದ್ ಕರ್ನಾಟಕ ವಿಮೋಚನೆ, ಕರ್ನಾಟಕ ಏಕೀಕರಣ, ದೇಶದ ಸ್ವಾತಂತ್ರ್ಯ ಮುಂತಾದ ಪ್ರಮುಖ ಚಳುವಳಿಗಳಲ್ಲಿ ತೊಡಗಿಸಿಕೊಂಡು, ಶರಣ ಶ್ರೇಷ್ಠರಾಗಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಗೆ ತಮ್ಮದೇ ಆದ ಕೊಡುಗೆ ನೀಡಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅವರ ಸೇವೆ ಅಪಾರವಾಗಿತ್ತು ಎಂದು ಸ್ಮರಿಸಿದ್ದಾರೆ.

ಈ ಸಮಯದಲ್ಲಿ ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಖಂಡ್ರೆ ಕುಟುಂಬಸ್ಥರಿಗೆ ಅಗಲಿಕೆ ನೋವು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

https://www.facebook.com/share/p/1Cpy2JXpBh

ಸಿಎಂ ಸಂತಾಪ

ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ.

ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ.

ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ.

Related Articles

Back to top button