ಬೆಳಗಾವಿ ಗ್ರಾಮೀಣದಲ್ಲಿ ಬಿಜೆಪಿಗೆ ಬಿಗ್ ಶಾಕ್: ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಿರೇಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಸೇರಿದ್ದಾರೆ.

ಮುಖಂಡರುಗಳಾದ ದಯಾನಂದ ಹಂಚಿನಮನಿ, ಬಸವರಾಜ ಹಂಚಿನಮನಿ, ಬಾಬು ಮುಸೆನ್ನವರ, ಅಜ್ಜಪ್ಪ ಮುಗಪ್ಪಗೋಳ, ನಾಗಪ್ಪ ಕಲಭಾಂವಿ, ನಿಜಲಿಂಗ ಅಂಗಡಿ, ಮಲ್ಲಪ್ಪ ಕಬ್ಬೂರ, ದೊಡ್ಡಯ್ಯ ಹಿರೇಮಠ, ಚಂದ್ರು ತಳವಾರ, ಮಾಂತಯ್ಯ ಹಿರೇಮಠ, ಉದಯ ಹುಲಮನಿ, ಬಾಳೇಶ ಕಕ್ಕಾಳಿ ಮತ್ತು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು.

ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು, ವಿಶೇಷವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕೆಲಸಗಳನ್ನು ಮೆಚ್ಚಿಕೊಂಡು ಕಾಂಗ್ರೆಸ್ ಸೇರುತ್ತಿರುವುದಾಗಿ ಇವರೆಲ್ಲ ಈ ಸಂದರ್ಭದಲ್ಲಿ ತಿಳಿಸಿದರು.ಬರಲಿರುವ ಚುನಾವಣೆಯಲ್ಲೂ ದೊಡ್ಡ ಅಂತರದಿಂದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಗೆಲ್ಲಿಸಲು ಕೆಲಸ ಮಾಡುವುದಾಗಿ ಅವರು ತಿಳಿಸಿದರು.

ಎಲ್ಲರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಇವರೆಲ್ಲರ ಆಗಮನದಿಂದ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಳ್ಳಲಿದ್ದು, ಪಕ್ಷದ ಸಂಘಟನೆಗೆ ಹೊಸ ಚೈತನ್ಯವನ್ನು ತುಂಬಲಿದ್ದಾರೆ. ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಅಂತರದಿಂದ ನನ್ನ ಗೆಲುವು ನಿಶ್ಚಯವಾಗಿದ್ದು, ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯುವ ಸಂಕಲ್ಪ ಮಾಡಿದ್ದೇನೆ. ಇದಕ್ಕೆ ಎಲ್ಲರ ಸಹಕಾರವಿರಲಿ ಎಂದು ವಿನಂತಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಡಿವೇಶ ಇಟಗಿ ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
