ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ ನಾಯಕರು
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ನಾಯಕರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.
ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ರಾಜ್ ಭವನ ಚಲೋ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ವಿಧಾನಸೌಧದಿಂದ ರಾಜಭವನದವರೆಗೆ ಬಿಜೆಪಿ ನಾಯಕರು ಪ್ರತಿಭಟನಾ ಮೆರೆವರಣಿ ನಡೆಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯದಲ್ಲಿ ಇಷ್ಟೊಂದು ಮಟ್ಟದ ಹಗರಣ ನಡೆದಿದೆ. ಸಿಎಂ ಗಮನಕ್ಕೆ ಬಾರದೇ ಇಷ್ಟೊಂದು ದೊಡ್ಡ ಮಟ್ಟದ ಹರಗಣ ನಡೆಯಲ್ಲ. ಸಿಎಂ ಸಿದ್ದರಾಮಯ್ಯ ಅವರೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು. ಹಗರಣ ನಡೆದು ಇಷ್ಟು ದಿನಗಳಾದರು ನಾಗೇಂದ್ರ ರಾಜೀನಾಮೆ ಪಡೆದಿಲ್ಲ. ಸಿಬಿಐ ತನಿಖೆಗೂ ಒಪ್ಪುತ್ತಿಲ್ಲ. ಹಣಕಾಸಿನ ಇಲಾಖೆ ಹೊಂದಿರುವ ಸಿದ್ದರಾಮಯ್ಯ ಅವರಿಗೆ ಈ ಪ್ರಕರಣದ ಎಲ್ಲಾ ಮಾಹಿತಿ ಗೊತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ. ಈ ಅಕ್ರಮದ ಹಣವನ್ನು ಲೋಕಸಭಾ ಚುನಾವಣೆಗೂ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಈ ವೇಳೆ ಅಶ್ವತ್ಥ ನಾರಾಯಣ್, ಎಸ್.ಆರ್. ವಿಶ್ವನಾಥ್, ಸುನಿಲ್ ಕುಮಾರ್, ಜ್ಞಾನೇಂದ್ರ, ಬೈರತಿ ಬಸವರಾಜ್, ಅರವಿಂದ್ ಬೆಲ್ಲದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ