ವಿಧಾನಸೌಧದ ಬಳಿ ಏಕಾಂಗಿ ಪ್ರತಿಭಟನೆ ಕುಳಿತ ಬಿಜೆಪಿ ಶಾಸಕ
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಹೋರಾಟ ನಡೆಸಿದ್ದಾರೆ.
ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಸರ್ಕಾರ ಅನುದಾನ ಕಡಿತಗೊಳಿಸಿದೆ ಎಂದು ಆರೋಪಿಸಿ ಮುನಿರತ್ನ ಹಾಗೂ ಬೆಂಬಲಿಗರು ಪ್ರತಿಭಟನಾ ಧರಣಿ ನಡೆಸಿದ್ದರು. ವಿಧಾನಸೌಧದ ಒಳಭಾಗದ ಗಾಂಧಿ ಪ್ರತಿಮೆ ಬಳಿ ಬೆಂಬಲಿಗರಿಗೆ ಧರಣಿಗೆ ಅವಕಾಶವಿರಲಿಲ್ಲ. ಮುನಿರತ್ನ ಒಬ್ಬರಿಗೆ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮುನಿರತ್ನ ಬೆಂಬಲಿಗರನ್ನು ವಶಕ್ಕೆ ಪಡೆದಿದ್ದಾರೆ.
ಶಾಸಕ ಮುನಿರತ್ನ ಏಕಾಂಗಿಯಾಗಿ ಪ್ರತಿಭಟನೆ ಮುಂದುವರೆಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ವಿರುದ್ಧದ ಬಿತ್ತಿಪತ್ರವನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮೃತ ನಗರೋತ್ಥಾನ ಯೋಜನೆಯಡಿ ತಮ್ಮ ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ಅನುದಾನವನ್ನು ಸರ್ಕಾರ ಕಡಿತಗೊಳಿಸಿ ಬ್ಯಾಟರಾಯನಪುರ, ಯಶವಂತಪುರ ಸೇರಿದಂತೆ ಬೇರೆ ಕ್ಷೇತ್ರಗಳಿಗೆ ಹಂಚಲಾಗಿದೆ ಎಂದು ಮುನಿರತ್ನ ಆರೋಪಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ