ಪ್ರಗತಿವಾಹಿನಿ ಸುದ್ದಿ: ಪ್ರಾಂಶುಪಾಲರಿಗೆ ಪ್ರಶಸ್ತಿ ತಡೆ ನೀಡಿದ ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಪ್ರತಿಭಟನೆಯ ವೇಳೆ ಸಿಎಂ ಸಿದ್ದರಾಮಯ್ಯ ಪ್ರತಿಕೃತಿಗೆ ಚಪ್ಪಲಿ ಏಟು ನೀಡಿದ ಹಿನ್ನೆಲೆಯಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ 11 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಾಂಶುಪಾಲರಿಗೆ ಪ್ರಶಸ್ತಿ ವಾಪಸ್ ಪಡೆದ ವಿಚಾರದಲ್ಲಿ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಅನಿರೀಕ್ಷಿತ ರಸ್ತೆ ತಡೆ ನಡೆಸಿ, ಸಿಎಂ ಪ್ರತಿಕೃತಿಗೆ ಚಪ್ಪಲಿ ಏಟು ಹೊಡೆದು, ಬೆಂಕಿ ಹಾಕಲಾಗಿತ್ತು.
ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಯಿಂದ ಸಿಎಂ ಪ್ರತಿಕೃತಿಗೆ ಚಪ್ಪಲಿ ಏಟು ಹೊಡೆಯಲಾಗಿತ್ತು.
ಶಾಂತಿಭಂಗ ತರುವ ಉದ್ದೇಶದಿಂದ ಇಂತಹ ಕೃತ್ಯ ಎಸೆಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸೌರಭ್ ಬಲ್ಲಾಳ್ ಮಣಿಪಾಲ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ಸೇರಿದಂತೆ ಬಿಜೆಪಿಯ 11 ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ