Belagavi NewsBelgaum NewsKannada NewsKarnataka NewsLatestPolitics

*ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ*

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಬೆಳಗಾವಿಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಬಿಜೆಪಿ ಮಹಾನಗರ ಘಟಕದ ವತಿಯಿಂದ ಧರಣಿ ಆರಂಭವಾಗಿದ್ದು, ಪ್ರತಿದಿನ ಎರಡು ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸೋಮವಾರ ರಾತ್ರಿ ನಡೆದ ಧರಣಿಯಲ್ಲಿ ಶಾಸಕ ಅಭಯ ಪಾಟೀಲ, ಮಾಜಿ ಶಾಸಕರಾದ ಮಹಾಂತೇಶ ಕವಟಗಿಮಠ, ಪಿ.ರಾಜೀವ, ಅರವಿಂದ ಪಾಟೀಲ, ಅನಿಲ ಬೆನಕೆ ಹಾಗೂ ಸಂಜಯ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಗೀತಾ ಸುತಾರ, ಮುಖಂಡರಾದ ಎಂ.ಬಿ. ಜಿರಲಿ, ಡಾ. ರವಿ ಪಾಟೀಲ, ಮುರುಘೇಂದ್ರ ಪಾಟೀಲ, ರಾಜೇಂದ್ರ ಹರಕುಣಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಬೆಳಗ್ಗೆಯಿಂದ ನಡೆಯುತ್ತಿರುವ ಸರಣಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ರಾತ್ರಿಯಿಡೀ ಧರಣಿ ಮುಂದುವರಿದಿದ್ದು, ಪ್ರತಿಭಟನಾ ಸ್ಥಳದಲ್ಲಿ ಮುಖಂಡರ ಭಾಷಣ, ಭಜನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

Home add -Advt


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಭಯ ಪಾಟೀಲ, ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಿದ್ದರು. ಇದೀಗ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿದರು.
“ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಮತ್ತೆ ಅಧಿಕಾರ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ದ್ವಂದ್ವ ನೀತಿ ಅನುಸರಿಸುತ್ತಿದೆ. ಭ್ರಷ್ಟಾಚಾರಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿರುವಂತಾಗಿದೆ. ನಾಗೇಂದ್ರ ಅವರು ರಾಜೀನಾಮೆ ನೀಡುವವರೆಗೆ ಹಾಗೂ ಅವರನ್ನು ಸಚಿವ ಸಂಪುಟದಿಂದ ಸಂಪೂರ್ಣವಾಗಿ ದೂರ ಇಡುವವರೆಗೆ ಬಿಜೆಪಿ ಹೋರಾಟ ಮುಂದುವರಿಸಲಿದೆ,” ಎಂದು ಅಭಯ ಪಾಟೀಲ ಹೇಳಿದರು.
ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಆರಂಭವಾಗಿರುವ ಅಹೋರಾತ್ರಿ ಧರಣಿ ಮುಂದಿನ ದಿನಗಳಲ್ಲೂ ಮುಂದುವರಿಯಲಿದ್ದು, ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರು ಹಂತ ಹಂತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

Related Articles

Back to top button