Belagavi NewsBelgaum NewsKannada NewsKarnataka NewsPolitics

*ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರೈತಪರ ಯೋಜನೆಗಳನ್ನು ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಹಾಗೂ ಬೆಳಗಾವಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಸೋಮವಾರ ಬೆಳಗಾವಿ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ  ಪ್ರತಿಭಟನಾ ರ‌್ಯಾಲಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಮನವಿ ಸಲ್ಲಿಸಿದರು.

Home add -Advt

ಬೆಳಗಾವಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆಯೆಂದು ಘೋಷಿಸಿ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಲಾಗಿದೆ. ರೈತರಿಗೆ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸಿ ಯಾವುದೇ ರೀತಿಯ ಲೋಡ್ ಶೆಡ್ಡಿಂಗ್ ಮಾಡಬಾರದು. ಬಿತ್ತನೆಗೆ ಅಗತ್ಯವಾದ ಬೀಜ ಮತ್ತು ರಸಗೊಬ್ಬರಗಳನ್ನು ಸಕಾಲಕ್ಕೆ ವಿತರಿಸಬೇಕು ಹಾಗೂ ಕಳಪೆ ಬೀಜ ಮತ್ತು ಗೊಬ್ಬರ ವಿತರಣೆಗೆ ಕಡಿವಾಣ ಹಾಕಬೇಕು ಎಂದು  ಪ್ರತಿಭಟನಾಕಾರರು ಆಗ್ರಹಿಸಿದರು.

ಚುನಾವಣಾ ಭರವಸೆಯಂತೆ ಕೃಷಿ ಸಾಲ ಮನ್ನಾವನ್ನು ಸಂಪೂರ್ಣವಾಗಿ ಜಾರಿಗೊಳಿಸಿಲ್ಲ ಎಂದು ಆರೋಪಿಸಿರುವ ಬಿಜೆಪಿ, ರೈತ ವಿದ್ಯಾನಿಧಿ ಹಾಗೂ ಕಿಸಾನ್ ಸಮ್ಮಾನ್ ಯೋಜನೆಗಳಡಿ ನೀಡಲಾಗುತ್ತಿದ್ದ ಹೆಚ್ಚುವರಿ ₹4,000 ಸಹಾಯಧನವನ್ನು ಮರುಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ, ಟ್ರಾನ್ಸ್‌ಫಾರ್ಮರ್ ದರ ಹೆಚ್ಚಳ ಹಾಗೂ ವಿದ್ಯುತ್ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದು, ಕೆರೆಗಳ ಹೂಳೆತ್ತುವಿಕೆ ಕಾಮಗಾರಿಗಳನ್ನು ನಿರ್ಲಕ್ಷ್ಯ ಮಾಡಿರುವುದು ಬರ ನಿರ್ವಹಣೆಯ ವೈಫಲ್ಯಕ್ಕೆ ಕಾರಣವಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳನ್ನು ತಕ್ಷಣ ಸಕ್ರಿಯಗೊಳಿಸಿ, ಪರ್ಯಾಯ ಬೆಳೆ ಬೀಜ, ರಸಗೊಬ್ಬರ, ಬೆಳೆ ವಿಮೆ, ಹನಿ ನೀರಾವರಿ ತಂತ್ರಜ್ಞಾನ, ಮೇವು ಬ್ಯಾಂಕ್ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಯುದ್ಧೋಪಾದಿಯಲ್ಲಿ ಜಾರಿಗೊಳಿಸುವಂತೆ ಆಗ್ರಹಿಸಿದೆ.

ಪ್ರತಿಭಟನೆಯಲ್ಲಿ  ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್, ಮಾಜಿ ಶಾಸಕ ಸಂಜಯ ಪಾಟೀಲ, ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ರಾಜ್ಯ ಮೋರ್ಚಾ ಜಿಲ್ಲಾ ಅಧ್ಯಕ್ಷ ಜಗದೀಶ್ ಬೋದಿಹಾಳ ಹಾಗೂ ರಾಜ್ಯ ಮೋರ್ಚಾ ಜಿಲ್ಲಾ ಅಧ್ಯಕ್ಷ ಕಲ್ಲಪ್ಪ ಶಾಮಣಕರ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button