*ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಈಗಾಗಲೇ ಪ್ರಕರಣ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಈ ನಡುವೆ ಬಿಜೆಪಿ ಕಾರ್ಯಕರ್ತರು ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿರುವ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಪೊಲೀಸ್ ಬಂದೋಬಸ್ತ್, ಬ್ಯಾರೀಕೇಡ್ ಗಳನ್ನು ತಳ್ಳಿ ಗೃಹ ಸಚಿವರ ಮನೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ.
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣದ ಜಾಲದ ಹಿಂದೆ ಭಯೋತ್ಪಾದಕರ ಕೈವಾಡ ಶಂಕೆಯಿದೆ. ಈ ಬಗ್ಗೆ ಸರ್ಕಾರ ಸೂಕ್ತ ತನಿಖೆ ಕೈಗೊಳ್ಳದೇ ಆರೋಪಿಗಳ ಬಗ್ಗೆ ಮೃಧು ಧೋರಣೆ ತಳೆಯುತ್ತಿರುವುದು ಸರಿಯಲ್ಲ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ