Karnataka NewsLatestPolitics

*ಬಿಜೆಪಿಯಲ್ಲಿಯೂ ಸಿಡಿ ಸಿಡಿ ಫ್ಯಾಕ್ಟರಿಯಿದೆ*: *ಅದ್ಯಾವಾಗ ಹೊರಬರುತ್ತೆ ನೋಡಬೇಕು ಎಂದ ಯತ್ನಾಳ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ. ಅಲ್ಲಿಯೂ ಕೆಲವು ಸ್ಟಿಂಗ್ ಆಪರೇಷನ್‌ಗಳು ನಡೆದಿವೆ. ಆ ಸಿಡಿಗಳು ಯಾವಾಗ ಹೊರಬರುತ್ತವೆ ಎಂಬುದನ್ನು ನೋಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಯತ್ನಾಳ್, ಕರ್ನಾಟಕದಲ್ಲಿ ಎರಡು ಸಿಡಿ ಫ್ಯಾಕ್ಟರಿಗಳಿವೆ ಎಂದು ತಾವು ಬಹಳ ಹಿಂದೆಯೇ ಹೇಳಿದ್ದಾಗಿ ತಿಳಿಸಿದರು. ಒಂದು ಸಿಡಿ ಫ್ಯಾಕ್ಟರಿ ಯಾವುದು ಎಂಬುದು ಎಲ್ಲರಿಗೂ ಗೊತ್ತಾಗಿದೆ. ಮತ್ತೊಂದು ಫ್ಯಾಕ್ಟರಿ ಬಿಜೆಪಿಯಲ್ಲೂ ಇದೆ ಎಂದು ಆರೋಪಿಸಿದರು.

ರಾಜಕೀಯ ಎದುರಾಳಿಗಳು ಹಾಗೂ ಭವಿಷ್ಯದಲ್ಲಿ ತಮಗೆ ಅಡ್ಡಿಯಾಗಬಹುದು ಎಂದು ಭಾವಿಸುವವರನ್ನು ಬ್ಲ್ಯಾಕ್‌ಮೇಲ್ ಮಾಡಲು ಇಂತಹ ವಿಡಿಯೋಗಳನ್ನು ಬಳಸಲಾಗುತ್ತಿದೆಎಂದರು.

ಕರ್ನಾಟಕದಲ್ಲಿ ಸಿಡಿ ಮತ್ತು ಸ್ಟಿಂಗ್ ಆಪರೇಷನ್‌ಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುವುದು ಒಂದು ವ್ಯವಹಾರವಾಗಿ ಬೆಳೆದಿದೆ. ರಾಜಕೀಯಕ್ಕೆ ಯಾವುದೋ ನೆಪದಲ್ಲಿ ಪ್ರವೇಶಿಸಿ, ವಿಡಿಯೋಗಳನ್ನು ಮಾಡಿಕೊಂಡು ಹಣಕ್ಕಾಗಿ ಶಾಸಕರನ್ನೇ ಬ್ಲ್ಯಾಕ್‌ಮೇಲ್ ಮಾಡುವ ತಂಡಗಳು ಬೆಂಗಳೂರಿನಲ್ಲಿ ಸಾಕಷ್ಟಿವೆ ಎಂದು ಆರೋಪಿಸಿದರು.

ಸ್ಟಿಂಗ್ ಆಪರೇಷನ್ ಪ್ರಕರಣದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷರು ಮಾತನಾಡುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದ ಯತ್ನಾಳ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈ ವಿಚಾರವಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನೂ ಈ ವಿಚಾರದಲ್ಲಿ ನೇರವಾಗಿ ಪ್ರಸ್ತಾಪಿಸಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೆಲವರು ನೇರವಾಗಿ ಆರೋಪಗಳನ್ನು ಮಾಡುತ್ತಿದ್ದರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ದೇಶದಲ್ಲೇ ಇಂತಹ ರಾಜಕೀಯ ಬೆಳವಣಿಗೆ ಕೆಟ್ಟ ಬೆಳವಣಿಗೆಯಾಗಿದೆ ಎಂದು ಯತ್ನಾಳ್ ಅಭಿಪ್ರಾಯಪಟ್ಟರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button