
ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಬಿಜೆಪಿ ಸದಸ್ಯ ರಾಮರಾವ್ ವಡ್ಕುಟೆ ಇಂದು ನವದೆಹಲಿಯ ಏಮ್ಸ್ನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ವೇಳೆ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಹಾಗೂ ತೀವ್ರ ಅನಾರೋಗ್ಯದ ಕಾರಣದಿಂದಾಗಿ ರಾಮರಾವ್ ವಡ್ಕುಟೆ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ತಜ್ಞ ವೈದ್ಯರ ತಂಡವು ನಿರಂತರ ಚಿಕಿತ್ಸೆ ನೀಡಿದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ನಿಧನರಾದರು ಎಂದು ಆಸ್ಪತ್ರೆ ಮತ್ತು ಕುಟುಂಬದ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಧಂಗರ್ ಸಮುದಾಯದ ಪ್ರಭಾವಿ ನಾಯಕರಾಗಿದ್ದ ರಾಮರಾವ್ ವಡ್ಕುಟೆ ಹಿಂಗೋಲಿ ಜಿಲ್ಲೆಯವರು. ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ಸಕ್ರಿಯವಾಗಿ ಶ್ರಮಿಸಿದ್ದರು.
ವಡ್ಕುಟೆ ಈ ಹಿಂದೆ ಶೇಲಿ-ಮೇಂಧಿ ಮಹಾಸಂಘದ (ಮೇಕೆ ಮತ್ತು ಕುರಿ ಸಾಕಾಣಿಕೆದಾರರ ಒಕ್ಕೂಟ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಮೊದಲು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದೊಂದಿಗೆ (ಎನ್ಸಿಪಿ) ಗುರುತಿಸಿಕೊಂಡಿದ್ದ ಅವರು, ಮಹಾರಾಷ್ಟ್ರ ವಿಧಾನ ಪರಿಷತ್ತಿನ (ಎಂಎಲ್ಸಿ) ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.
2019ರ ಅಕ್ಟೋಬರ್ನಲ್ಲಿ ಎನ್ಸಿಪಿ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅವರನ್ನು, 2021ರಲ್ಲಿ ಬಿಜೆಪಿಯ ಹಿಂಗೋಲಿ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಅಲ್ಲದೆ, ಹಿಂಗೋಲಿ ಲೋಕಸಭಾ ಕ್ಷೇತ್ರದ ಪಕ್ಷದ ಚುನಾವಣಾ ಮುಖ್ಯಸ್ಥರಾಗಿ ಮತ್ತು ಉಸ್ತುವಾರಿಯಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದರು. ಮಹಾರಾಷ್ಟ್ರದಲ್ಲಿ ಧಂಗರ್ ಸಮುದಾಯದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ತಮ್ಮ ಕಳಂಕರಹಿತ ರಾಜಕೀಯ ಜೀವನಕ್ಕೆ ಹೆಸರಾಗಿದ್ದರು.




