Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ*; *ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಮಹಾನಗರ ಪಾಲಿಕೆ ಕಚೇರಿಗೆ ಅಪರಿಚಿತ ವ್ಯಕ್ತಿಗಳಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಪಾಲಿಕೆಯ ಕಚೇರಿಯಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸಂದೇಶ ರವಾನೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಇ-ಮೇಲ್ ಮೂಲಕ ಬಂದಿರುವ ಬೆದರಿಕೆ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಆರಂಭಿಸಿದ್ದಾರೆ.

ಮಹಾನಗರ ಪಾಲಿಕೆಯ ಕಚೇರಿಯ ವಿವಿಧ ವಿಭಾಗಗಳು, ಕೊಠಡಿಗಳು ಹಾಗೂ ಆವರಣದ ಪ್ರತಿಯೊಂದು ಭಾಗದಲ್ಲೂ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಶ್ವಾನ ದಳದ ನೆರವಿನೊಂದಿಗೆ ಅನುಮಾನಾಸ್ಪದ ವಸ್ತುಗಳಿಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತಾ ವ್ಯವಸ್ಥೆಯನ್ನೂ ಪರಿಶೀಲಿಸಲಾಗುತ್ತಿದೆ.

ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾರ್ಕೆಟ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕಾಲಿಮಿರ್ಜಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಸಂದೇಶವನ್ನು ಯಾರು ಕಳುಹಿಸಿದ್ದಾರೆ, ಯಾವ ಉದ್ದೇಶದಿಂದ ಕಳುಹಿಸಲಾಗಿದೆ ಹಾಗೂ ಇದರ ಹಿಂದೆ ಯಾರಾದರೂ ಕಿಡಿಗೇಡಿಗಳ ಕೈವಾಡ ಇದೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಳ್ಳುವ ಸಾಧ್ಯತೆಯಿದೆ.

ಸದ್ಯ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದಿಂದ ಪರಿಶೀಲನೆ ಮುಂದುವರಿದಿದ್ದು, ಕಚೇರಿಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿದೆಯೇ ಎಂಬುದು ಅಧಿಕೃತ ಪರಿಶೀಲನೆಯ ಬಳಿಕವಷ್ಟೇ ಸ್ಪಷ್ಟವಾಗಲಿದೆ.

ಒಟ್ಟಾರೆ, ಸಾರ್ವಜನಿಕರ ಕೆಲಸ ಕಾರ್ಯಗಳು ನಡೆಯುವ ಮಹಾನಗರ ಪಾಲಿಕೆ ಕಚೇರಿಗೇ ಬಾಂಬ್ ಬೆದರಿಕೆ ಬಂದಿರುವುದು ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇದು ಕಿಡಿಗೇಡಿಗಳ ಕೃತ್ಯವೇ ಅಥವಾ ಗಂಭೀರ ಬೆದರಿಕೆಯೇ ಎಂಬುದನ್ನು ಪೊಲೀಸ್ ತನಿಖೆ ಬಹಿರಂಗಪಡಿಸಬೇಕಿದೆ.

Related Articles

Back to top button