
ಪ್ರಗತಿವಾಹಿನಿ ಸುದ್ದಿ: ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಯಾತ್ರಿಕರನ್ನು ಹೊತ್ತು ಸಾಗುತ್ತಿದ್ದ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಹಲವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಭಕ್ತರನ್ನು ಸಾಗಿಸುತ್ತಿದ್ದ ಬಸ್‌ಗೆ ನಿಯಂತ್ರಣ ತಪ್ಪಿ ಟ್ರಕ್ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ನಂದಗಂಜ್ ಪೊಲೀಸ್ ಠಾಣೆ ಸಮೀಪದ ಕುಸ್ಮಿಕಲಾ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು ಹಾಗೂ ಆಡಳಿತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಕುಂಭಮೇಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಈ ವೇಳೆ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿ 30 ಜನರು ಸಾವನ್ನಪ್ಪಿದ್ದರು.
					
				
					
					
					
					
					
					
					
