Kannada NewsKarnataka NewsNationalTravel

*ಬಸ್–ಗ್ಯಾಸ್ ಟ್ಯಾಂಕರ್ ಡಿಕ್ಕಿ*: *10 ಮಂದಿ ಸಾವು, 27 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರ ಬಸ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯರು ಸೇರಿದಂತೆ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 27 ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ನಡೆಸಿದೆ.

ಗ್ವಾದರ್ ಜಿಲ್ಲೆಯ ಓರ್ಮಾರಾ ಸಮೀಪದ ಕರಾವಳಿ ಹೆದ್ದಾರಿಯ ಬಸೂಲ್ ಕ್ರಾಸಿಂಗ್ ಬಳಿ ಗುರುವಾರ ಈ ದುರ್ಘಟನೆ ಸಂಭವಿಸಿದೆ. ತುರ್ಬತ್‌ನಿಂದ ಕರಾಚಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್, ಕ್ರಾಸಿಂಗ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳಿಗೆ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಸುಟ್ಟ ಸ್ಥಿತಿಯಲ್ಲಿದ್ದ 10 ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ 27 ಮಂದಿಯನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಬಹುತೇಕರು ಬಸ್ ಪ್ರಯಾಣಿಕರಾಗಿದ್ದಾರೆ. ಮೃತರಲ್ಲಿ ಮಹಿಳೆಯರೂ ಸೇರಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಸ್ಲಾಂ ಬಂಗಲ್‌ಜೈ ತಿಳಿಸಿದ್ದಾರೆ.

ವಾಹನಗಳಿಗೆ ಹೊತ್ತಿಕೊಂಡ ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಸಾಕಷ್ಟು ಹರಸಾಹಸ ಪಡಬೇಕಾಯಿತು. ಇದರಿಂದ ರಕ್ಷಣಾ ಕಾರ್ಯಾಚರಣೆಯೂ ವಿಳಂಬವಾಯಿತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Related Articles

Back to top button