ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಬಸ್ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಒಟ್ಟು 32 ಜನರು ಗಾಯಗೊಂಡಿದ್ದಾರೆ, ಸಮರ್ಥ (7) ಹಾಗೂ ಶ್ರೀಕಾಂತ್ (12) ಮೃತ ವಿದ್ಯಾರ್ಥಿಗಳು.
ಗಾಯಾಳುಗಳಲ್ಲಿ 18 ಜನರನ್ನು ರಿಮ್ಸ್ ಆಸ್ಪತ್ರೆಗೆ ಹಾಗೂ 14 ವಿದ್ಯಾರ್ಥಿಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ರಾಯಚೂರು ಶಾಲಾ ಬಸ್ ದುರಂತ: ಸಚಿವ ಶರಣ ಪ್ರಕಾಶ್ ಪಾಟೀಲ್ ತೀವ್ರ ಸಂತಾಪ
ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ತಾಲೂಕಿನ ಬಳಿ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟು, ಒಟ್ಟು 18 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡ ಸುದ್ದಿ ತೀವ್ರ ದುಃಖವಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಸಂಭವಿಸಿದ ದುರಂತದ ಕುರಿತು ಕೂಡಲೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಸಚಿವರು ಸೂಕ್ತ ಚಿಕಿತ್ಸೆ ಕೊಡಿಸಿ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಲು ಅಧಿಕಾರಿಗಳನ್ನು ನಿಯೋಜಿಸಲು ಸೂಚನೆ ನೀಡಿದ್ದಾರೆ.
ಈ ಘಟನೆಯಲ್ಲಿ ಕುರ್ಡಿ ಗ್ರಾಮದ ಸಮರ್ಥ (7 ವರ್ಷ) ಹಾಗೂ 7 ನೇ ತರಗತಿಯ ವಿದ್ಯಾರ್ಥಿ ಶ್ರೀಕಾಂತ (12 ವರ್ಷ) ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆಯ ಸುದ್ದಿ ತಿಳಿದು ನಿಜಕ್ಕೂ ತೀವ್ರ ಬೇಸರವಾಯಿತು. ಮೃತ ವಿದ್ಯಾರ್ಥಿಗಳಿಗೆ ಸಂತಾಪವನ್ನು ಸೂಚಿಸುತ್ತೇನೆ. ಸ್ಕೂಲ್ ಬಸ್‌ನಲ್ಲಿ ಇದ್ದ ಮೂವರು ಮಕ್ಕಳ ಕಾಲುಗಳೇ ತುಂಡಾಗಿರುವ ಮಾಹಿತಿ ಇದೆ. ಇವರಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ