ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.
ಭಾನುವಾರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಜನರಿಗಾಗಿ ಇರುವ ಪಕ್ಷ. ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ರಮೇಶ ಜಾರಕಿಹೊಳಿ ಅಥವಾ ಯಾರು ಬರುತ್ತಾರೆಯೋ ಅಂಥವರಿಗೆ ಜಿಲ್ಲಾ ಮಟ್ಟದಲ್ಲಿನ ನಾಯಕರೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸಂಘಟಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. ಇದರ ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬರುತ್ತಿದ್ದಾರೆ. ಜನರು ಸಾವಿರಾರು ಸಂಖ್ಯೆಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದರು.
ಜನರ ಜೊತೆಗೆ ನೇರವಾಗಿ ಸಂಪರ್ಕ ಮಾಡುತ್ತಿದ್ದೇವೆ. ಆಯಾ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಗುರುತಿಸಿ ಕೆಲಸ ಪ್ರಾರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದರು. ಬೆಳಗಾವಿ ಸುವರ್ಣ ವಿಧಾನಸೌಧ ಸದ್ಬಳಕೆಯಾಗಬೇಕು. ಈ ಭಾಗದ ಜನರು ಸಮಸ್ಯೆ ತೆಗೆದುಕೊಂಡು ಬೆಂಗಳೂರು ಬರುವುದು ಬೇಡ. ಇಲ್ಲಿಯೇ ಇತ್ಯರ್ಥವಾಗಬೇಕು. ರಾಜ್ಯದಲ್ಲಿ ಜೆಡಿಎಸ್ ಸರಕಾರಕ್ಕೆ ಬಂದರೆ ಇದೊಂದು ಕಾಯಕಲ್ಪ ನೀಡಲಾಗುವುದು ಎಂದರು.
ಜೆಡಿಎಸ್ ಪಕ್ಷ ಎಲ್ಲ ಸಮಾಜದವರಿಗೆ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದೆ. ಸರ್ವಜನಾಂಗದ ಶಾಂತಿಯ ತೋಟ ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕಿದೆ. ಕರ್ನಾಟಕ ಸಾರ್ವಭೌಮತ್ವ ಉಳಿಸಿಕೊಳ್ಳುತ್ತೇವೆ. ಈ ಭಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ