*ಬಿಜೆಪಿ-ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆದ ‘ಸೈನಿಕ’: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಯೋಗೇಶ್ವರ್*
ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ?
ಪ್ರಗತಿವಾಹಿನಿ ಸುದ್ದಿ: ರಾಜಕೀಯ ಚದುರಂಗದಾಟವೆಂದರೆ ಚನ್ನಪಟ್ಟಣ ಉಪಚುನಾವಣಾ ಅಖಾಡ ಎಂದರೆ ತಪ್ಪಾಗಲಾರದು. ಎನ್ ಡಿಎ ಟಿಕೆಟ್ ನಿರೀಕ್ಷೆ ಹುಸಿಯಾದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಡ್ಷಿಸಿದ್ದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ನಿನ್ನೆ ಸಂಜೆವರೆಗೂ ಎನ್ ಡಿಎ ಟಿಕೆಟ್ ಗಾಗಿ ಕಾದಿದ್ದ ಯೋಗೇಶ್ವರ್, ಟಿಕೆಟ್ ಸಿಗದ ಕಾರಣ ಇಂದು ಬೆಳಿಗ್ಗೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಮಾತುಕತೆ ಬಳಿಕ ಇಬ್ಬರು ನಾಯಕರು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಜರಿದ್ದರು.
ಸಭೆ ಬಳಿಕ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಅಧಿಕೃತ ಘೋಷಣೆಯಾಗಿದ್ದು, ಬೆಳಿಗ್ಗೆ 11:30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಇಂದು ಸಂಜೆ ಅಥವಾ ನಾಳೆ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರು ಅಧಿಕೃತವಾಗಿ ಪ್ರಕತವಾಗುವ ಸಾಧ್ಯತೆ ಇದೆ. ಎನ್ ಡಿಎ ಟಿಕೆಟ್ ಸಿಗದ ಬೆನ್ನಲ್ಲೇ ಸಿ.ಪಿ.ಯೋಗೇಶ್ವರ್ ದಿಢೀರ್ ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿ ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಸಜ್ಜಾಗಿದ್ದು, ಬಿಜೆಪಿ-ಜೆಡಿಎಸ್ ನಾಯಕರಿಗೆ ಸೆಡ್ಡುಹೊಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ