ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ಕೈತಪ್ಪಿಸಲು ಬಿಜೆಪಿ ಶಾಸಕರ ತಂತ್ರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಸಚಿವಾಕಾಂಕ್ಷಿಗಳ ಅಸಮಾಧಾನವೂ ಹೆಚ್ಚಿದೆ. ಕಲ್ಯಾಣ ಕರ್ನಾಟಕಕ್ಕೆ ಭಾಗಕ್ಕೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯೊಂದಿಗೆ ಸಿ.ಪಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೈತಪ್ಪಿಸಬೇಕೆಂಬ ನಿಟ್ಟಿನಲ್ಲಿ ಒತ್ತಡ ಹೇರಲು ಸುರಪುರ ಶಾಸಕ ರಾಜೂಗೌಡ, ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಕೆಲ ಶಾಸಕರು ಸಭೆ ನಡೆಸಿದ್ದಾರೆ.

ಈಗಾಗಲೇ ನಿನ್ನೆ ಸಭೆ ಸೇರಿದ್ದ ಶಾಸಕರು ಇಂದೂ ಕೂಡ ಮತ್ತೆ ಸಭೆ ನಡೆಸಿ, ಬಳಿಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆ ಮುಂದಿಡಲು ನಿರ್ಧರಿಸಿದ್ದಾರೆ.

ಸಿ.ಪಿ ಯೋಗೇಶ್ವರ್‌ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದ ಹಿನ್ನೆಲೆಯಲ್ಲಿ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬುವುದು ವರಿಷ್ಠರ ಸೂಚನೆಯಾಗಿದೆ. ಈ ಹಿನ್ನಲೆಯಲ್ಲಿ ಸಿಎಂ, ಯೋಗೇಶ್ವರ್‌ಗೆ ಸಂಪುಟದಲ್ಲಿ ಸ್ಥಾನ ನೀಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಇದರ ಬೆನ್ನಲ್ಲೇ ಬಿಎಸ್‌ವೈ ಬಣದ ಶಾಸಕರೇ ಇದಕ್ಕೆ ಇರೋಧ ವ್ಯಕ್ತಪಡಿಸುವ ನಿಟ್ಟಿನಲ್ಲಿ ಪ್ರತ್ಯೇಕ ಸಭೆ ನಡೆಸುತ್ತಿದ್ದಾರೆ.

ರೇಣುಕಾಚಾರ್ಯ, ರಾಜೂಗೌಡ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳೂ ಆಗಿದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕ ಸಮತೋಲನ ಕಾಪಾಡಿ ಕಲ್ಯಾಣ ಕರ್ನಾಟಕ, ಸೇರಿದಂತೆ ಇತರ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡಬೇಕು ಎಂದು ಹೇಳುವ ಮೂಲಕ ಯೋಗೇಶ್ವರ್ ಗೆ ಸಚಿವ ಸ್ಥಾನ ಕೈತಪ್ಪಿಸಬೇಕು ಎಂಬ ನಿಟ್ಟಿನಲ್ಲಿ ತಂತ್ರಗಾರಿಗೆ ಆರಂಭಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button