*ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕ*: *ಇಂದು ದೆಹಲಿಗೆ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳ ನೇಮಕಾತಿ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ.
ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳ ಭರ್ತಿ, ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳ ನೇಮಕದ ಕುರಿತು ವರಿಷ್ಠರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ.
ಡಿಸೆಂಬರ್ 2ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ನಿಗಮ-ಮಂಡಳಿ ನೇಮಕಾತಿ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳಿಗೆ ತೆರೆ ಎಳೆಯಲು ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಮೂಲಕ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಲ್ಲಿರುವ ಅಸಮಾಧಾನವನ್ನು ನಿವಾರಿಸಿ, ಅಧಿವೇಶನದ ವೇಳೆ ಪಕ್ಷವನ್ನು ಒಗ್ಗಟ್ಟಿನಿಂದ ಮುನ್ನಡೆಸುವ ಉದ್ದೇಶ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆ ಹಾಗೂ ಮಹಿಳಾ ಮೀಸಲಾತಿ ವಿಚಾರವೂ ದೆಹಲಿ ಭೇಟಿಯ ಪ್ರಮುಖ ಅಜೆಂಡಾವಾಗಿರಲಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಸಂಬಂಧ ಮಸೂದೆ ಮಂಡನೆಯಾಗುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಂಟಿ ಸುದ್ದಿಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಕೇರಳದ ವಿ.ಡಿ. ಸತೀಶನ್ ಅವರೊಂದಿಗೆ ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಒಟ್ಟಾರೆ, ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ರಾಜ್ಯ ಕಾಂಗ್ರೆಸ್ನ ಸಂಘಟನಾತ್ಮಕ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ವಿಚಾರದಲ್ಲಿ ಮಹತ್ವ ಪಡೆದುಕೊಂಡಿದೆ.


