ಪ್ರಗತಿವಾಹಿನಿ ಸುದ್ದಿ, ನವದಹಲಿ – ರಾಜ್ಯದಲ್ಲಿ ಸಚಿವಸಂಪುಟ ವಿಸ್ತರಣೆ ಸಂಬಂಧ ಬಿಜೆಪಿ ಹೈಕಮಾಂಡ್ ನೀಡಿರುವ ಸೂಚನೆಯ ಗುಟ್ಟನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌಪ್ಯವಾಗಿಟ್ಟಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು ಇನ್ನು 2 -3 ದಿನದಲ್ಲಿ ಸಿಹಿ ಸುದ್ದಿ ಸಿಗಬಹುದು ಎಂದಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆಯ ವದಂತಿಯೂ ದಟ್ಟವಾಗಿ ಹಬ್ಬಿತ್ತು.
ರಾಜ್ಯದಲ್ಲಿ ಸಚಿವಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ನವದೆಹಲಿಗೆ ಕರೆಸಿಕೊಂಡಿತ್ತು.
ಬೆಳಗ್ಗೆ ನವದೆಹಲಿಗೆ ಧಾವಿಸಿದ ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಕೂಡ ಇದ್ದರು.
ಇದೇ 16 ಮತ್ತು 17ರಂದು ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ ಇಲ್ಲಿಗೆ ಬಂದಾಗಲೇ ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಲಿದ್ದಾರೆ ಎನ್ನುವ ಸುದ್ದಿ ಹೊರಬಂದಿದೆ. ಯಡಿಯೂರಪ್ಪ ದೆಹಲಿಯಲ್ಲಿ ಈ ಕುರಿತು ಸ್ಪಷ್ಟ ಹೇಳಿಕೆ ನೀಡಿಲ್ಲ. ಬೆಂಗಳೂರಿಗೆ ಬಂದ ನಂತರ ಈ ಕುರಿತು ಸ್ಪಷ್ಟ ಮಾಹಿತಿ ತಿಳಿಯಬಹುದು.
ಒಟ್ಟಿನಲ್ಲಿ ರಾಜ್ಯದಲ್ಲಿ ಸಂಕ್ರಾಂತಿ ಹೊತ್ತಿಗೆ ರಾಜ್ಯ ಸರಕಾರ ಮತ್ತು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಬೆಳವಣಿಗೆಯಾಗುವುದಂತೂ ನಿಶ್ಚಿತ.
ಈ ಮಧ್ಯೆ ಹುಬ್ಬಳ್ಳಿಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಬದಲಾವಣೆ ನಿಶ್ಚಿತ. ಆದರೆ ಯಾವಾಗ ಎನ್ನುವುದನ್ನು ಅವರೇ ಹೇಳಬೇಕು ಎಂದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ