Kannada NewsLatestPolitics

*ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ:ಶಾಸಕ ಸುರೇಶ್‌ಗೌಡ ಪುತ್ರಿಯಿಂದ ಬಹಿರಂಗ ಕ್ಷಮೆಯಾಚನೆ*

ಪ್ರಗತಿವಾಹಿನಿ ಸುದ್ದಿ : ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯಗೌಡ ಅವರು ಪಿಎಸ್‌ಐ ಸವಿತಾ ಪಾಟೀಲ್ ಅವರಿಗೆ ವೀಡಿಯೋ ಮೂಲಕ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವರ ದರ್ಶನಕ್ಕೆ ತೆರಳಿದ್ದ ಸಂದರ್ಭದಲ್ಲಿ ಗರ್ಭಗುಡಿಗೆ ಪ್ರವೇಶಿಸುವ ವಿಚಾರವಾಗಿ ಐಶ್ವರ್ಯಗೌಡ ಮತ್ತು ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್‌ಐ ಸವಿತಾ ಪಾಟೀಲ್ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಐಶ್ವರ್ಯಗೌಡ ಅವರು ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಪ್ರಕರಣದ ಹಿನ್ನೆಲೆಯಲ್ಲಿ ಕ್ಷಮೆಯಾಚಿಸುವಂತೆ ನ್ಯಾಯಾಲಯ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಐಶ್ವರ್ಯಗೌಡ ಅವರು ಇದೀಗ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

ವಿಡಿಯೋದಲ್ಲಿ “ಆಗಸ್ಟ್ 12ರಂದು ಭೀಮನ ಅಮಾವಾಸ್ಯೆಯಂದು ನಾನು ಮತ್ತು ನನ್ನ ಇಬ್ಬರು ಮಕ್ಕಳೊಂದಿಗೆ ಪಾಂಡವಪುರದ ಉಕ್ಕಡಮ್ಮ ದೇವಸ್ಥಾನಕ್ಕೆ ತೆರಳಿದ್ದೆ. ಅಂದು ದೇವಸ್ಥಾನದಲ್ಲಿ ಹೆಚ್ಚಿನ ಜನಸಂದಣಿ ಇದ್ದಿದ್ದರಿಂದ ಹಾಗೂ ನಾನು ಮಕ್ಕಳ ತಾಯಿಯಾಗಿರುವ ಕಾರಣ ದೇವರ ದರ್ಶನ ಪಡೆಯುವ ಸಂದರ್ಭದಲ್ಲಿ ನನ್ನ ಮತ್ತು ಮಹಿಳಾ ಪಿಎಸ್‌ಐ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು” ಎಂದು ಐಶ್ವರ್ಯಗೌಡ ಹೇಳಿದ್ದಾರೆ.

“ಉದ್ವೇಗದಿಂದ ಅಹಿತಕರ ಘಟನೆ ನಡೆದಿದೆ. ಈ ಘಟನೆ ನಡೆಯಬಾರದಿತ್ತು. ಈ ಘಟನೆಯ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಕರ್ತವ್ಯದಲ್ಲಿದ್ದ ಪಿಎಸ್‌ಐ ಸವಿತಾ ಪಾಟೀಲ್ ಅವರಿಗೆ ಇದರಿಂದ ನೋವಾಗಿದ್ದರೆ, ನಾನು ಬೇಷರತ್ ಆಗಿ ಕ್ಷಮೆಯಾಚಿಸುತ್ತೇನೆ” ಎಂದು ವೀಡಿಯೋ ಮೂಲಕ ತಿಳಿಸಿದ್ದಾರೆ.

ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆಯಂತೆ ಐಶ್ವರ್ಯಗೌಡ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

Related Articles

Back to top button