*ಸೆಪ್ಟಂಬರ್ 22ರಿಂದ ಮರು ಜಾತಿಗಣತಿ ಸಮೀಕ್ಷೆ: ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು.
ಸಭೆ ಮುಖ್ಯಾಂಶಗಳು:
• ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
• ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದರು.
• ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸುವ ನಿರ್ಧಾರ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ.
• ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು.
• ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು.
• ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚನೆ. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನ.
• ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು.
• ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
• ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು.
• ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.