
ಪ್ರಗತಿವಾಹಿನಿ ಸುದ್ದಿ: ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಫಲಿತಾಂಶ ಶೇ.100ಕ್ಕೆ ತಲುಪಿಸಲು ಶಿಕ್ಷಕರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಹತ್ವದ ಸೂಚನೆ ನೀಡಿದ್ದಾರೆ.
ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ಆಸಕ್ತಿ ವಹಿಸಿ, ವಿಶೇಷ ತರಗತಿಗಳನ್ನು ನಡೆಸಿ, ಮಕ್ಕಳಿಗೆ ಹೆಚ್ಚುವರಿ ಕಲಿಕಾ ಅವಕಾಶಗಳನ್ನು ಕಲ್ಪಿಸಿದ ಪರಿಣಾಮ ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.98.08 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92.25ರಷ್ಟು ಫಲಿತಾಂಶ ದಾಖಲಾಗಿದೆ. ಇದು ರಾಜ್ಯದ ಸಾರ್ವಕಾಲಿಕ ದಾಖಲೆಯಾಗಿದ್ದು, ಈ ಬಾರಿ ಕೂಡ ಶೇ.100ರಷ್ಟು ಫಲಿತಾಂಶ ಸಾಧಿಸುವ ಗುರಿಯೊಂದಿಗೆ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತವಾಗಿ ಐಐಟಿ ಧಾರವಾಡದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಗುಣಾತ್ಮಕ ಫಲಿತಾಂಶ ಸುಧಾರಣೆಗಾಗಿ ರೂಪಿಸಿರುವ ರಾಜ್ಯಮಟ್ಟದ ‘ಮಿಷನ್-60+’ ಕಾರ್ಯಕ್ರಮಕ್ಕೆ ಧಾರವಾಡ ವಿಭಾಗ ಮಟ್ಟದ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರದ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು. ಈ ಸೂಚನೆ ನೀಡಿದ್ದಾರೆ.
ಕಳೆದ ಸಾಲಿನ ಉತ್ತಮ ಫಲಿತಾಂಶದ ಹಿಂದೆ ಶಿಕ್ಷಕರ ವಿಶೇಷ ಪರಿಶ್ರಮವಿದೆ ಎಂದು ಸ್ಮರಿಸಿದ ಸಚಿವರು, ಅನೇಕ ಪೋಷಕರು ನನ್ನನ್ನು ಭೇಟಿಯಾಗಿ, ಮಕ್ಕಳಿಗೆ ಮಾಡೆಲ್ ಪ್ರಶ್ನೆಪತ್ರಿಕೆಗಳನ್ನು ಬಿಡಿಸುವ ಅಭ್ಯಾಸ ಮಾಡಿಸಿದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಹಿಂದಿನ ವರ್ಷದ ಪ್ರಶ್ನೆಪತ್ರಿಕೆಗಳನ್ನು ಸಮಗ್ರವಾಗಿ ಅವಲೋಕಿಸಿ, ಮಾಡೆಲ್ ಪ್ರಶ್ನೆಪತ್ರಿಕೆಗಳ ಅಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಪರೀಕ್ಷೆಗೆ ಇನ್ನೂ ಸಾಕಷ್ಟು ಸಮಯವಿದೆ, ಈ ಬಾರಿಯೇ ಫಲಿತಾಂಶವನ್ನು ಶೇ.100ಕ್ಕೆ ತಲುಪಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನಿಸೋಣ. ಎಸ್ಎಸ್ಎಲ್ಸಿ-ಪಿಯುಸಿ ಫಲಿತಾಂಶ ಶೇ.100ಕ್ಕೆ ತಲುಪಿಸಲು ಶಿಕ್ಷಕರು ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಅವರ ಭವಿಷ್ಯವನ್ನೇ ರೂಪಿಸುತ್ತಾರೆ. ಪೋಷಕರಿಗಿಂತ ಹೆಚ್ಚಿನ ಸಮಯವನ್ನು ಮಕ್ಕಳೊಂದಿಗೆ ಕಳೆಯುವ ಶಿಕ್ಷಕರು ಅವರ ಬದುಕಿಗೆ ದಾರಿದೀಪವಾಗಿದ್ದಾರೆ. ನಾನು ಶಾಲೆಯಲ್ಲಿ ಅತ್ಯುತ್ತಮ ವಿದ್ಯಾರ್ಥಿಯಾಗಿದ್ದೆ ಎಂದು ಹೇಳಿಕೊಳ್ಳುವುದಿಲ್ಲ. ಆದರೆ, ಇಂದು ರಾಜ್ಯದ ಉತ್ತಮ ಶಿಕ್ಷಣ ಸಚಿವನಾಗಿ ಕಾರ್ಯನಿರ್ವಹಿಸಲು ಶಿಕ್ಷಕರೇ ಕಾರಣ. ನಿಮ್ಮ ಬಗ್ಗೆ ನನಗೆ ಅಪಾರ ಹೆಮ್ಮೆ ಮತ್ತು ಗೌರವವಿದೆ. ಶಿಕ್ಷಕರಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡಲು ನಾನು ಬದ್ಧನಾಗಿದ್ದೇನೆ ಎಂದರು.
ಮಕ್ಕಳಲ್ಲಿ ಕೇವಲ ಶೈಕ್ಷಣಿಕ ಪ್ರತಿಭೆಯನ್ನಷ್ಟೇ ಗುರುತಿಸಿದರೆ ಸಾಲದು. ಕ್ರೀಡೆ, ಸಂಗೀತ, ವಿಜ್ಞಾನ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಮತ್ತು ಪ್ರತಿಭೆ ಹೊಂದಿರುವ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವೂ ಶಿಕ್ಷಕರಿಂದ ಆಗಬೇಕು. ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವ ಜೊತೆಗೆ ಅವರ ವ್ಯಕ್ತಿತ್ವ ವಿಕಸನಕ್ಕೂ ಆದ್ಯತೆ ನೀಡಬೇಕು. ಶಿಕ್ಷಣ ಇಲಾಖೆಯಲ್ಲಿ ಸಮಸ್ಯೆಗಳಿಲ್ಲ ಎಂದು ನಾನು ಹೇಳುವುದಿಲ್ಲ. ಇರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



