Wanted Tailor2
Cancer Hospital 2
Bottom Add. 3

*ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಬರ ಅಧ್ಯಯನ ತಂಡ; ಬರ-ಕೃಷಿ ಪರಿಸ್ಥಿತಿಯ ವಾಸ್ತವಾಂಶ ವಿವರಿಸಿದ ಸಿಎಂ ಸಿದ್ದರಾಮಯ್ಯ*

ರೈತರ ಹಿತ ಕಾಪಾಡಿ: ಕೇಂದ್ರ ತಂಡಕ್ಕೆ ಸಿಎಂ ಸಲಹೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿಗಳು, ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ವಾಸ್ತವ ಪರಿಸ್ಥಿತಿಯನ್ನು ವಿವರಿಸಿದರು.

ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕೆಂದು ಅವರು ಅಭಿಪ್ರಾಯಪಟ್ಟರು.

ಮುಂಗಾರು ವಿಳಂಬ ಹಾಗೂ ಆಗಸ್ಟ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್‌ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ವಿವರಿಸಿದರು.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟೈಸ್‌ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗ ಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ವಿ. ಮಹೇಶ್‌, ಕೇಂದ್ರ ತಂಡದ ಮುಖ್ಯಸ್ಥ ಅಜಿತ್‌ ಕುಮಾರ್‌ ಸಾಹು ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.

Bottom Add3
Bottom Ad 2

You cannot copy content of this page