Kannada NewsKarnataka NewsLatest

*ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಿಗಲಿದೆಯಾ ಫಲ*: *ಕೇಂದ್ರದ ಕಡೆಯಿಂದ ಬಂತು ಮಹತ್ವದ ಸುಳಿವು*

ಪ್ರಗತಿವಾಹಿನಿ ಸುದ್ದಿ: ಗೌರವಧನ ಹೆಚ್ಚಳಕ್ಕಾಗಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ ತೀವ್ರಗೊಂಡಿರುವ ಬೆನ್ನಲ್ಲೇ ಮಹತ್ವದ ಬೆಳವಣಿಗೆಯ ಸುಳಿವು ಸಿಕ್ಕಿದೆ. ದೇಶದಾದ್ಯಂತ ಇರುವ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವ ಪ್ರಸ್ತಾವ ಸಿದ್ಧವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಮಂಜುನಾಥ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದಿಂದ ₹1,500 ಹೆಚ್ಚಳಕ್ಕೆ ಸಿದ್ಧತೆ ನಡೆಯುತ್ತಿದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರವೂ ತನ್ನ ಪಾಲಿನ ಗೌರವಧನ ಹೆಚ್ಚಿಸಬೇಕೆಂದು ಒತ್ತಾಯಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಹೋರಾಟದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಮಂಜುನಾಥ್, ಗೌರವಧನ ಹೆಚ್ಚಳದ ವಿಚಾರವಾಗಿ ಬೆಳಗ್ಗೆಯೇ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು. ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವಂತೆ ಸಲಹೆ ನೀಡಿದ್ದೇನೆ ಎಂದರು.

ದೇಶದಾದ್ಯಂತ ಇರುವ ಆಶಾ ಕಾರ್ಯಕರ್ತೆಯರಿಗೆ ₹1,500 ಗೌರವಧನ ಹೆಚ್ಚಳ ಮಾಡುವ ಪ್ರಸ್ತಾವ ಸಿದ್ಧಪಡಿಸಲಾಗಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಈ ಪ್ರಸ್ತಾವ ಮಂಡಿಸಿ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರದ ಹೆಚ್ಚಳದ ಜೊತೆಗೆ ರಾಜ್ಯ ಸರ್ಕಾರವೂ ಆಶಾ ಕಾರ್ಯಕರ್ತೆಯರ ಗೌರವಯುತ ಬದುಕಿಗೆ ಅಗತ್ಯವಾದ ಗೌರವಧನವನ್ನು ಹೆಚ್ಚಿಸಬೇಕು ಎಂದು ಡಾ. ಮಂಜುನಾಥ್ ಒತ್ತಾಯಿಸಿದರು.

ಇದೇ ವೇಳೆ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರತ್ಯೇಕ ರಾಜ್ಯದ ಕುರಿತು ನಡೆಸಿದ ಚರ್ಚೆಗೂ ಅವರು ಪ್ರತಿಕ್ರಿಯಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕೇವಲ ಅನುದಾನ ನೀಡಿದರೆ ಸಾಲದು. ಆ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಮುಖ್ಯ ಎಂದರು.

ಅಭಿವೃದ್ಧಿಯ ವಿಚಾರವನ್ನು ಬಿಟ್ಟು ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟ ಅವರು, ರಾಜ್ಯದ ಒಟ್ಟು ಆದಾಯದಲ್ಲಿ ಶೇಕಡಾ 40ರಷ್ಟು ಕೊಡುಗೆ ಬೆಂಗಳೂರಿನಿಂದ ಬರುತ್ತದೆ ಎಂದು ಹೇಳಿದರು.

ಬೆಂಗಳೂರು ಪ್ರತ್ಯೇಕವಾದರೆ ಅಭಿವೃದ್ಧಿಗೆ ಹಣ ಎಲ್ಲಿಂದ ಬರುತ್ತದೆ ಎಂಬ ಪ್ರಶ್ನೆಯನ್ನೂ ಎತ್ತಿದರು. ಅಧಿಕಾರದಲ್ಲಿದ್ದಾಗಲೇ ಅಭಿವೃದ್ಧಿ ಕೆಲಸಗಳನ್ನು ಸರಿಯಾಗಿ ಮಾಡಿದರೆ ಪ್ರತ್ಯೇಕತೆಯ ಭಾವನೆ ಮೂಡುವುದಿಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಪ್ರಸ್ತಾವ ಚಳಿಗಾಲದ ಅಧಿವೇಶನದಲ್ಲಿ ಯಾವ ರೂಪ ಪಡೆಯಲಿದೆ ಮತ್ತು ರಾಜ್ಯ ಸರ್ಕಾರ ಈ ಬೇಡಿಕೆಗೆ ಹೇಗೆ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

Related Articles

Back to top button