
ಪ್ರಗತಿವಾಹಿನಿ ಸುದ್ದಿ: ಹೈಕೋರ್ಟ್ ವಕೀಲೆ, ಕೆಎಎಸ್ ಅಧಿಕಾರಿ ಪತ್ನಿ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.
ಚೈತ್ರಾಗೌಡ ಆತ್ಮಹತ್ಯೆ ಕೇಸ್ ನ್ನು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಸ್ ಸಿಸಿಬಿಗೆ ವರ್ಗಾವಣೆಯಾಗುತ್ತಿದ್ದಂತೆ ಸಿಸಿಬಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.
ಚೈತ್ರಾಗೌಡ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದು ಅವರು ಮಾತನಾಡಿರುವ ಕಾಲ್ ಲಿಸ್ಟ್ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಚೈತ್ರಾ ಅವರ ಹಣಕಾಸು ವ್ಯವಹಾರದ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲ ದಿನಗಳ ಹಿಂದೆ ವಕೀಲೆ, ಕೆಎಎಸ್ ಅಧಿಕಾರಿ ಶಿವಕುಮಾರ್ ಪತ್ನಿ ಚೈತ್ರಾಗೌಡ ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಮೂರು ತಿಂಗಳ ಹಿಂದೆ ಡೈರಿಯಲ್ಲಿ ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಪತ್ತೆಯಾಗಿತ್ತು. ಅದರಲ್ಲಿ ತಾನು ಡಿಪ್ರೆಶನ್ ನಿಂದ ಬಳಲುತ್ತಿರುವುದಾಗಿ, ಅದರಿಂದ ಹೊರಬರಲು ಯತ್ನಿಸಿದರೂ ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖವಾಗಿತ್ತು. ಹೈಕೋರ್ಟ್ ವಕೀಲೆ, ಸಾಮಾಜಿಕ ಚಟುವಟಿಕೆಯಲ್ಲಿಯೂ ತೊಡಗಿಸಿಕೊಂಡಿದ್ದ ಧೈರ್ಯವಂತೆ ಚೈತ್ರಾ ಅವರ ಆತ್ಮಹತ್ಯೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸಿಸಿಬಿ ತನಿಖೆಗೆ ಪ್ರಕರಣ ವರ್ಗಾವಣೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ