*ಹನೂರು ಎನ್ ಕೌಂಟರ್ ನಲ್ಲಿ ಮೂವರು ಬಲಿ ಬೆನ್ನಲ್ಲೇ ಮಲೆ ಮಹದೇಶ್ವರ ವನ್ಯಜೀವಿಧಾಮಕ್ಕೆ ದುಷ್ಕರ್ಮಿಗಳಿಂದ ಬೆಂಕಿ*

ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶ್ದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣ ಬೆನ್ನಲ್ಲೇ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಅರಣ್ಯ ಇಲಾಖೆಯನ್ನು ಗುರಿಯಾಗಿಸಿಕೊಂಡು ಸರಣಿ ದುಷ್ಕೃತ್ಯವೆಸಗುತ್ತಿದ್ದಾರೆ.
ಕಾವೇರಿ ಹಾಗೂ ಮಲೆ ಮಹದೇಶ್ವರ ವನ್ಯಜೀವಿಧಾಮಗಳಲ್ಲಿ ಅರಣ್ಯ ಸಿಬ್ಬಂದಿಯನ್ನು ಟಾರ್ಗೆಟ್ ಮಾಡುತ್ತಿರುವ ದುಷ್ಕರ್ಮಿಗಳು, ಇದೀಗ ಮಲೆ ಮಹದೇಶ್ವರ ವನ್ಯಜೀವಿಧಾಮದ ಸುಮಾರು 10 ಎಕರೆ (2.5 ಹೆಕ್ಟೇರ್) ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಯ ಕೆನ್ನಾಲಿಗೆಗೆ ಬರೋಬ್ಬರಿ 10 ಎಕರೆ ಅರಣ್ಯ ಪ್ರದೇಶ ಸಂಪೂರ್ಣವಾಗಿ ಭಸ್ಮವಾಗಿದೆ. ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಲ ದಿನಗಳ ಹಿಂದೆ ಕಾವೇರಿ ವನ್ಯಜೀವಿಧಾಮದ ಕಳ್ಳಬೇಟೆ ತಡೆ ಶಿಬಿರಗಳನ್ನು ಗುರಿಯಾಗಿಸಿಕೊಂಡಿದ್ದ ದುಷ್ಕರ್ಮಿಗಳು, ಜಿಲೆಟಿನ್ ಕಡ್ಡಿಗಳನ್ನು ಬಳಸಿ ನಾಲ್ಕು ಎಪಿಸಿ ಕ್ಯಾಂಪ್‌ಗಳನ್ನು ಸ್ಫೋಟಿಸಿ ಪುಡಿಪುಡಿ ಮಾಡಿದ್ದರು.
ಮೂವರು ಬೇಟೆಗಾರರ ಎನ್‌ಕೌಂಟರ್ ಬಳಿಕ ಕಾಡಿನಲ್ಲಿ ದುಷ್ಕರ್ಮಿಗಳ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಪ್ರತಿದಿನ ಪ್ರಾಣಭಯದಲ್ಲೇ ಕರ್ತವ್ಯಕ್ಕೆ ಹಾಜರಾಗುವ ಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೆಂಕಿ ಪ್ರಕರಣದ ತನಿಖೆ ನಡೆಸಲಾಗುತ್ತಿದ್ದು, ಕಿಡಿಗೇದಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಎಸಿಎಫ್ ವಿಜಯ್ ಹೊಸೂರು ತಿಸಿದ್ದಾರೆ.




