ಪ್ರಗತಿವಾಹಿನಿ ಸುದ್ದಿ: ಬಿಜೆಪಿ-ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಸೇರ್ಪಡೆಯಗೈದ್ದ ಸಿ.ಪಿ.ಯೋಗೇಶ್ವರ್ ಇಂದು ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನವೆಂಬರ್ 13ರಂದು ನಡೆಯಲಿರುವ ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಇಂದು ಭರ್ಜರಿ ರೋಡ್ ಶೋ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು.
ಚನ್ನಪಟ್ಟಣದ ಮಂಗಳವಾರ ಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಬಳಿಕ ತಾಲೂಕು ಕಚೇರಿಗೆ ಆಗಮಿಸಿದ ಸಿ.ಪಿ.ಯೋಗೇಶ್ವರ್ ತಮ್ಮ ಉಮೇದುವಾರಿ ಸಲ್ಲಿಕೆ ಮಾಡಿದರು.
ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು: ಸಿಎಂ ಸಿದ್ದರಾಮಯ್ಯ
ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಯೋಗೀಶ್ವರ್ ಪರ ರೋಡ್ ಶೋ ನಲ್ಲಿ ಭಾಗವಹಿಸಿ ಚನ್ನಪಟ್ಟಣ ಜನತೆಗೆ ಕರೆ ನೀಡಿದರು.
ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.
ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.
ಜನಕಲ್ಯಾಣದ ಸರ್ಕಾರದಲ್ಲಿ ಯೋಗೀಶ್ವರ್ ಇರ್ತಾರೆ
ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೀಶ್ವರ್ ಅವರು ಇರಬೇಕು. ಹೆಚ್.ಡಿ.ಕುಮಾರಸ್ವಾಮಿಯವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೀಶ್ವರ್ ಅವರು ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದರು.
ರೋಡ್ ಶೋನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು
ಎರಡು ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನು ಎನ್ನುವ ಪಟ್ಟಿಯನ್ನು ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಕ್ಷೇತ್ರದ ಅಭಿವೃದ್ದಿಗೆ ಅವರ ಸಾಕ್ಷಿ ಗುಡ್ಡೆಯನ್ನು ಜನರ ಮುಂದಿಡಲಿ.
ಶುಭ ಘಳಿಗೆಯಲ್ಲಿ ಯೋಗೇಶ್ವರ್ ಪಕ್ಷ ಸೇರಿದ್ದಾರೆ. ಇವರ ಕೈ ಬಲಪಡಿಸುವುದರ ಮೂಲಕ ದೇಶಕ್ಕೆ ಬಲವಾದ ಸಂದೇಶ ನೀಡಬೇಕು. ಅತಿ ಹೆಚ್ಚು ಮತಗಳ ಅಂತರದಿಂದ ಇವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ.
ಮುಂದಿನ ದಿನಗಳಲ್ಲಿ ಮಿಕ್ಕ ವಿಚಾರಗಳನ್ನು ನಾನು ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಸಾಕಷ್ಟು ಸಿನಿಮಾಗಳನ್ನು ನಾವು ನೋಡಬೇಕಿದೆ. ಚುನಾವಣೆ ಗೆಲ್ಲುವುದೊಂದೇ ನಮ್ಮ ಗುರಿ. ಲೋಕಸಭಾ ಚುನಾವಣೆ ಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಚನ್ನಪಟ್ಟಣದ ಜನತೆ 80 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ್ದರು. ಆದರೆ ಮಿಕ್ಕ ಕಡೆ ಕಡಿಮೆ ಮತಗಳು ಬಂದ ಕಾರಣಕ್ಕೆ ಗೆಲುವು ಸಾಧ್ಯವಾಗಲಿಲ್ಲ.
ಕಾರ್ಯಕರ್ತರ ಕೈ ಬಿಡುವುದಿಲ್ಲ, ಅವರೊಟ್ಟಿಗೆ ನಾವಿದ್ದೇವೆ
ಡಿ.ಕೆ.ಶಿವಕುಮಾರ್ ಹಾಗೂ ಸುರೇಶ್ ಅವರನ್ನು ನಂಬಿ ಬಿಜೆಪಿ ಮತ್ತು ದಳದಿಂದ ಅನೇಕ ಕಾರ್ಯಕರ್ತರು ಬಂದಿದ್ದಾರೆ. ನೀವು ನಮ್ಮ ಕೈ ಬಲಪಡಿಸಿದ್ದೀರಿ, ಯಾವುದೇ ಕಾರಣಕ್ಕೂ ನಿಮ್ಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಡು ನೀರಿನಲ್ಲಿ ಕೈ ಬಿಡುವ ಪ್ರಶ್ನೆಯಿಲ್ಲ. ಭವಿಷ್ಯದಲ್ಲಿಯೂ ನಿಮ್ಮ ಜೊತೆ ನಾವಿರುತ್ತೇವೆ. ಯೋಗೇಶ್ವರ್ ಅವರ ಜೊತೆಯೂ ಇರುತ್ತೇವೆ.
ಚನ್ನಪಟ್ಟಣಕ್ಕೆ 500 ಕೋಟಿ ಅನುದಾನ ನೀಡಿದ್ದೇವೆ
ಚನ್ನಪಟ್ಟಣಕ್ಕೆ ಹೊಸರೂಪವನ್ನು ನೀಡುವುದಕ್ಕೆ ನಾವು ಬದ್ಧವಾಗಿದ್ದೇವೆ. ಕರ್ನಾಟಕದ ಅಭಿವೃದ್ದಿಯೇ ನಮ್ಮ ಸಂಕಲ್ಪ. ಈ ಗುರಿಯನ್ನಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ. ಚನ್ನಪಟ್ಟಣದ ಅಭಿವೃದ್ದಿಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಸುಮಾರು 500 ಕೋಟಿ ಅನುದಾನ ನೀಡಲಾಗಿದೆ.
ಜಾತ್ಯಾತೀತ ಎನ್ನುವ ಹೆಸರನ್ನು ಇಟ್ಟುಕೊಂಡಿರುವ ಜನತಾದಳ ಕೋಮುವಾದಿ ಬಿಜೆಪಿ ಜೊತೆ ಏಕೆ ಮೈತ್ರಿ ಮಾಡಿಕೊಂಡಿತು. ದಳದವರು ಅನುಕೂಲದ ರಾಜಕಾರಣಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಭಾವನನ್ನೇ ಬಿಜೆಪಿಯಿಂದ ಕಣಕ್ಕೆ ಇಳಿಸಿದರು.
ಚನ್ನಪಟ್ಟಣದ ಅಭಿವೃದ್ದಿ ನಮ್ಮಿಂದ ಸಾಧ್ಯ
ಚನ್ನಪಟ್ಟಣದ ಋಣವನ್ನು ತೀರಿಸಬೇಕು. ಈ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಜೊತೆ ಕೈ ಜೋಡಿಸಿ, ಜನಸೇವೆ ಮಾಡಬೇಕು ಎನ್ನುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಈ ಕೈ ಚನ್ನಪಟ್ಟಣದಲ್ಲಿ ಇದ್ದರೇ ಅಭಿವೃದ್ದಿ ಸಾಧ್ಯ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ