ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಗೃಹಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ಯೋಜನೆಗಳನ್ನು ಚುನಾವಣೆಗೆ ಮುನ್ನ ಘೋಷಿಸಲಾಗಿತ್ತು.
ಈ ಕುರಿತು ಹಣಕಾಸು, ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು, ಇಂಧನ ಮತ್ತಿತರ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಯವರು ಯೋಜನೆಗಳನ್ನು ಜಾರಿಗೊಳಿಸುವ ವಿಚಾರದಲ್ಲಿ ವರದಿಯೊಂದನ್ನು ಸಿದ್ಧಪಡಿಸುವಂತೆ ತಿಳಿಸಿದರು.
ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿಯವರು ಬುಧವಾರ ಮಧ್ಯಾಹ್ನ 12 ಗಂಟೆಗೆ ಎಲ್ಲ ಸಚಿವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಯೋಜನೆಗಳನ್ನು ಯಾವ ರೀತಿ ಜಾರಿಗೊಳಿಸಬಹುದು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ